ಬೆಂಗಳೂರು: 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ನಡೆದಿದ್ದ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಮರು ಮೌಲ್ಯಮಾಪನ ಮಾಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಮಧ್ಯಂತರ ಅರ್ಜಿಗಳನ್ನು ವಜಾಗೊಳಿಸಿದೆ.
ಉತ್ತರ ಪತ್ರಿಕೆಗಳನ್ನು ಮರು ಮೌಲ್ಯಮಾಪನ ಮಾಡುವಂತೆ ಕೆಲ ಆಯ್ಕೆಯಾಗಿದ್ದ ಅಭ್ಯರ್ಥಿಗಳು ಸಲ್ಲಿಸಿದ್ದ ಮಧ್ಯಂತರ ಅರ್ಜಿಗಳ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಇಂದು ಅರ್ಜಿಗಳನ್ನು ವಜಾಗೊಳಿಸಿ ತೀರ್ಪು ನೀಡಿದೆ. ಇದರೊಂದಿಗೆ 2011ನೇ ಸಾಲಿನಲ್ಲಿ ಎ ಮತ್ತು ಬಿ ವೃಂದದ ಹುದ್ದೆಗಳಿಗೆ ನೇಮಕಗೊಂಡಿದ್ದ 362 ಅಭ್ಯರ್ಥಿಗಳ ಆಸೆಗೆ ತಣ್ಣೀರೆರಚಿದಂತಾಗಿದೆ.
ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿ 8 ವರ್ಷಗಳು ಕಳೆದಿವೆ. ಪರೀಕ್ಷೆಗಳು ಮುಗಿದು ಐದೂವರೆ ವರ್ಷಗಳಾಗಿವೆ. ಇಷ್ಟು ಸಮಯದ ನಂತರ ಉತ್ತರ ಪತ್ರಿಕೆಗಳನ್ನು ಮರುಮೌಲ್ಯ ಮಾಪನಕ್ಕೆ ಒಳಪಡಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ಈ ಮಧ್ಯಂತರ ಅರ್ಜಿಗಳು ವಿಚಾರಣೆಗೆ ಅರ್ಹವಲ್ಲ ಎಂದು ತೀರ್ಪಿನಲ್ಲಿ ವಿವರಿಸಿದೆ.
ಪ್ರಕರಣದ ಸಂಬಂಧ ತನಿಖೆ ನಡೆಸಿ ಸಿಐಡಿ ನೀಡಿರುವ ಮಧ್ಯಂತರ ವರದಿ ಆಘಾತಕಾರಿಯಾಗಿದ್ದು, ಉತ್ತರಪತ್ರಿಕೆಗಳ ಮೌಲ್ಯಮಾಪನದಲ್ಲಿ ನಡೆದಿರುವ ಅಕ್ರಮಗಳು ನಾಚಿಕೆಗೇಡಿನ ವಿಷಯವಾಗಿದೆ. ಇದು ಕರ್ನಾಟಕ ಲೋಕಸೇವಾ ಆಯೋಗದ ವಿಶ್ವಾಸಾರ್ಹತೆಯನ್ನು ಅಲುಗಾಡುವಂತೆ ಮಾಡಿದೆ. ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಕೆಲ ವೈಯಕ್ತಿಕ ಹಿತಾಸಕ್ತಿಯುಳ್ಳವರು ಮಧ್ಯಪ್ರವೇಶಿಸಿರುವುದರಿಂದ ವ್ಯಾಪಕ ಭ್ರಷ್ಟಾಚಾರ ನಡೆದಿರುವುದು ಕಂಡುಬರುತ್ತಿದೆ ಎಂದು ಹೈಕೊರ್ಟ್ ಅಭಿಪ್ರಾಯಪಟ್ಟಿದೆ.









