ಎತ್ತಿನಹೊಳೆ ಯೋಜನೆ: 527 ಕೆರೆಗಳ ಹೂಳೆತ್ತಲು ಸಿಎಂ ಸೂಚನೆ

0
2550

ಬೆಂಗಳೂರು: ಎತ್ತಿನಹೊಳೆ ಯೋಜನೆಯಡಿ 5 ಜಿಲ್ಲೆಗಳ ವ್ಯಾಪ್ತಿಯಲ್ಲಿನ 527 ಕೆರೆಗಳ ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಲು ಈ ಕೆರೆಗಳ ಹೂಳೆತ್ತಲು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ, ಪಶ್ಚಿಮ ಘಟ್ಟಗಳಲ್ಲಿ ಹರಿದು ಅರಬ್ಬಿ ಸಮುದ್ರ ಸೇರುವ ಎತ್ತಿನಹೊಳೆ ಮತ್ತು ಅದರ ಉಪನದಿಗಳ ನೀರನ್ನು ಪೂರ್ವಾಭೀಮುಖವಾಗಿ ಹರಿಸಿ, ಬರ ಪೀಡಿತ ಜಿಲ್ಲೆಗಳಾದ ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರು ಮತ್ತು ಅಂತರ್ಜಲ ಮರುಪೂರಣಕ್ಕಾಗಿ ಎತ್ತಿನಹೂಳೆ ಯೋಜನೆಯನ್ನು ರೂಪಿಸಲಾಗಿದೆ. ಸಣ್ಣ ನೀರಾವರಿ ಇಲಾಖೆಯು, ಯೋಜನೆಯಡಿ ನೀರು ಪೂರೈಸಲು ಉದ್ದೇಶಿಸಿರುವ ಕೆರೆಗಳ ಪುನಶ್ಚೇತನವನ್ನು ಹಂತ ಹಂತವಾಗಿ ಯೋಜನೆಯ ಜೊತೆ ಸಮಾನಾಂತರವಾಗಿ ಕೈಗೊಳ್ಳಲು ಹಾಗೂ ಈ ನೀರನ್ನು ಬಳಸಿಕೊಳ್ಳಲು ಗ್ರಾಮೀಣಾಭಿವೃದ್ಧಿ ಇಲಾಖೆಯು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಎತ್ತಿನ ಹೊಳೆ ಯೋಜನೆಗೆ ಮೂರು ಭೂಸ್ವಾಧೀನಾಧಿಕಾರಿಗಳ ಹುದ್ದೆಗಳು ಮಂಜೂರಾಗಿದ್ದು, ಇವರನ್ನು ತುರ್ತಾಗಿ ನೇಮಕ ಮಾಡಲು ಮುಖ್ಯಮಂತ್ರಿಗಳು ಸೂಚಿಸಿದರು.

ಯೋಜನೆಗೆ ಅವಶ್ಯವಿರುವ 21 ಹಳ್ಳಿಗಳ 5000 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳುವ ಹಾಗೂ ವಶಪಡಿಸಿಕೊಂಡಿರುವ ಭೂಮಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಯಯೋಜನೆಯನ್ನು ರೂಪಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್, ಕೃಷಿ ಸಚಿವ ಶಿವಶಂಕರ ರೆಡ್ಡಿ, ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

- Call for authors -

LEAVE A REPLY

Please enter your comment!
Please enter your name here