ಶಾಲಾ ಕಾಲೇಜುಗಳ ಕಟ್ಟಡ ಅಭಿವೃದ್ಧಿಗೆ 1 ಸಾವಿರ ಕೋಟಿ ಅನುದಾನ: ಸಿಎಂ ಕುಮಾರಸ್ವಾಮಿ

0
150

ಮೈಸೂರು: ಸರ್ಕಾರ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಬೇಕಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಈ ಸಾಲಿನಲ್ಲಿ ಸರ್ಕಾರಿ ಶಾಲಾ, ಕಾಲೇಜುಗಳ ಕಟ್ಟಡಗಳ ನಿರ್ಮಾಣ ಹಾಗೂ ದುರಸ್ತಿಗಾಗಿ 1 ಸಾವಿರ ಕೋಟಿ ರೂಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 2018-19ನೇ ಸಾಲಿನ ಸಾಂಸ್ಕೃತಿಕ ವೇದಿಕೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಬಡ, ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಾರೆ. ಇವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು. ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಇರುವ ಶಿಕ್ಷಕರ ಕೊರತೆಯನ್ನು ನೀಗಿಸಲು ಶೀಘ್ರದಲ್ಲೇ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದರು.

ಮೈಸೂರು ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ನಡೆಸುತ್ತಿದ್ದು, ಈ ಕಾಲೇಜು ನಗರದ ಕೇಂದ್ರ ಭಾಗದಲ್ಲಿ ಇರುತ್ತದೆ. ಕಾಲೇಜನ್ನು ಸ್ಥಳಾಂತರಿಸಿದರೇ, ಬಹಳಷ್ಟು ಪೋಷಕರು ಮಕ್ಕಳನ್ನು ಕಾಲೇಜಿಗೆ ಕಳುಹಿಸುವುದಿಲ್ಲ. ಆದರಿಂದ ಸದರಿ ಕಾಲೇಜನ್ನು ಸ್ಥಳಾಂತರಿಸದೇ ಇಲ್ಲೇ ಉಳಿಸಿಕೊಂಡು ಬೇಕಿರುವ 18 ಹೆಚ್ಚುವರಿ ಕೊಠಡಿಗಳನ್ನು ಇಲ್ಲೇ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಹಾರಾಣಿ ಕಲಾ ಕಾಲೇಜು ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಅಂಗವಾಗಿ ಆಡಿಟೋರಿಯಂ ನಿರ್ಮಿಸಿಕೊಡುವಂತೆ, ಕ್ರೀಡಾ, ಯೋಗ ಅಭ್ಯಾಸ ಕೈಗೊಳ್ಳಲು ಕೊಠಡಿ, ಕಾಲೇಜಿನ ಸುತ್ತ ಕಾಂಪೌಂಡ್ ನಿರ್ಮಾಣ, ಹೆಚ್ಚಿನ ಶೌಚಾಲಯಗಳ ನಿರ್ಮಾಣ, ಸೋಲಾರ್ ವ್ಯವಸ್ಥೆ, ಆಡಳಿತ ಕಚೇರಿ ಉನ್ನತೀಕರಣ, ಉನ್ನತ ಮಟ್ಟದ ಲ್ಯಾಬ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಿದ್ದು, ಅವುಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಕೊಡಗು ನೆರೆ ಸಂತ್ರಸ್ತರಿಗೆ 23 ಲಕ್ಷ ರೂ. ಚೆಕ್‍ನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು. ಕಾಲೇಜಿನಿಂದ ಬಿನ್ನವತ್ತಳಿಕೆಯನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್, ಶಾಸಕ ಎಲ್ ನಾಗೇಂದ್ರ, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯಿಮಾ ಸುಲ್ತಾನ ನಜೀರ್ ಅಹಮದ್, ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

- Call for authors -

LEAVE A REPLY

Please enter your comment!
Please enter your name here