5 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ

0
17

ಮಂಡ್ಯ: ಸಕ್ಕರೆ ನಾಡು ಮಂಡ್ಯಗೆ ಸಿಎಂ ಕುಮಾರಸ್ವಾಮಿ ಬರಪೂರ ಕೊಡುಗೆ ನೀಡಿದ್ದಾರೆ. ಬರೊಬ್ಬರಿ ಐದು ಸಾವಿರ ಕೋಟಿ ರೂಪಾಯಿ ಯೋಜನೆಗಳನ್ನು ನೀಡಿದ್ದು, ಇಂದು ಈ ಎಲ್ಲಾ ಯೋಜನೆಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ ಮಂಡ್ಯ ಜನತೆ ಬಗ್ಗೆ ತಮಗಿರುವ ಭಾವನೆಗಳನ್ನು ಬಿಚ್ಚಿಟ್ಟರು.

ಸರ್ಕಾರಿ ಮಹಾ ವಿದ್ಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 5 ಸಾವಿರ ಕೋಟಿ ರೂ.ಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಕುಮಾರಸ್ವಾಮಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮನೆಯ ಮಗನಾಗಿ ಈ ಜಿಲ್ಲೆಯ ಜನತೆಯ ಋಣವನ್ನು ತೀರಿಸಲು ಪ್ರಯತ್ನಿಸಿದ್ದೇನೆ ಎಂದರು.

ನಾನು ಕೇವಲ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಮಾತ್ರ ಒತ್ತು ನೀಡಿಲ್ಲ. ನಾನು ಯಾವುದೋ ಒಂದು ಭಾಗಕ್ಕೆ ಮಾತ್ರ ಮುಖ್ಯಮಂತ್ರಿಯಲ್ಲ, ಇಡೀ ನಾಡಿನ ಮುಖ್ಯಮಂತ್ರಿಯಾಗಿದ್ದು, ಇಡೀ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೇಳಿದರು.

ಮೈಸೂರು ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕಾಗಿ ಎಲ್ಲಾ ಸರ್ಕಾರಗಳು 340 ಕೋಟಿ ರೂ. ನೀಡಿವೆ. ಈ ಹಿನ್ನೆಲೆಯಲ್ಲಿ ಪುನಶ್ಚೇತನ ಮಾಡುವುದನ್ನು ಬಿಟ್ಟು ಸುಮಾರು 450 ಕೋಟಿ ರೂ.ಗಳಲ್ಲಿ ಹೊಸ ಕಾರ್ಖಾನೆ ಸ್ಥಾಪಿಸಲು ನಿರ್ಧರಿಸಿದ್ದು, ಬರುವ ಏಪ್ರಿಲ್ ಅಥವಾ ಮೇ ಮೊದಲ ವಾರದಲ್ಲಿ ಶಂಕುಸ್ಥಾಪನೆ ಮಾಡುತ್ತೇನೆ. ಇದಕ್ಕೆ ಮೊದಲ ಹಂತವಾಗಿ 100 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿರುವುದಾಗಿ ಅವರು ತಿಳಿಸಿದರು.

ಪಿಎಸ್‍ಎಸ್‍ಕೆ ಕಾರ್ಖಾನೆಯ ಮೇಲೆ 42 ಸಾವಿರ ಕೋಟಿ ರೂ. ಸಾಲ ಇದೆ. ಅದನ್ನೂ ಸಹ ಪ್ರಾರಂಭಿಸಲು ಅಧಿಕಾರಿಗಳ ಜೊತೆ ಸಭೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ನಿಮ್ಮ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಇಂದು ಜಿಲ್ಲೆಯ ಅಭಿವೃದ್ಧಿಗೆ ಚಾಲನೆ ನೀಡಿದ್ದೇನೆ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ನನ್ನ ಹೃದಯದಲ್ಲಿ ಗುರಿ ಇಟ್ಟುಕೊಂಡಿದ್ದೇನೆ. ನನ್ನ ಉಸಿರಿರುವವರೆಗೂ ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದರು.

ಮಂಡ್ಯ ಕ್ಷೇತ್ರದ ಶಾಸಕ ಎಂ.ಶ್ರೀನಿವಾಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಚಿವರಾದ ಸಿ.ಎಸ್. ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಸಾ.ರಾ. ಮಹೇಶ್, ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ, ಶಾಸಕರಾದ ಕೆ.ಸುರೇಶ್‍ಗೌಡ, ಕೆ.ಸಿ.ನಾರಾಯಣಗೌಡ, ಡಾ. ಕೆ.ಅನ್ನದಾನಿ, ಕೆ.ಟಿ.ಶ್ರೀಕಂಠೇಗೌಡ, ಜಿಪಂ ಅಧ್ಯಕ್ಷೆ ನಾಗರತ್ನ ಸ್ವಾಮಿ, ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಇತರರು ಉಪಸ್ಥಿತರಿದ್ದರು.

- Call for authors -

LEAVE A REPLY

Please enter your comment!
Please enter your name here