ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಎಸ್ಎಸ್ಎಲ್ಸಿ ಇಂಗ್ಲೀಷ್ ಪ್ರಶ್ನೆ ಪತ್ರಿಕೆ ಫೇಕ್ ಆಗಿದ್ದು ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆಗಳನ್ನು ಕಿಡಿಗೇಡಿಗಳು ಹರಿಬಿಟ್ಟಿದ್ದು, ಇದು ಫೇಕ್ ಪ್ರಶ್ನೆ ಪತ್ರಿಕೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲು ತಾವು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವ ಸುರೇಶ್ಕುಮಾರ್ ಹೇಳಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪೋಷಕರು ಇಂತಹ ಸುದ್ದಿಗಳಿಗೆ ಕಿವಿ ಕೊಡಬೇಡಬಾರದೆಂದು ಮನವಿ ಮಾಡಿರುವ ಸಚಿವ ಸುರೇಶ್ ಕುಮಾರ್, ವಿದ್ಯಾರ್ಥಿಗಳು ಸ್ಥೈರ್ಯದಿಂದ ಪರೀಕ್ಷೆ ಬರೆಯಬೇಕೆಂದು ಹೇಳಿದ್ದಾರೆ. ಮಾಧ್ಯಮಗಳು ಇಂತಹ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಹರಡದಿರಲು ಮನವಿ ಮಾಡಿದ್ದಾರೆ.









