ಅಚ್ಚುಕಟ್ಟಾಗಿ ನಡೆದ ಎಸ್ಸೆಸ್ಸೆಲ್ಸಿ ಪ್ರಥಮ ಭಾಷಾ ಪರೀಕ್ಷೆ : ಸುರೇಶ್ ಕುಮಾರ್

0
1

ಬೆಂಗಳೂರು: ಆರನೇ ದಿನವಾದ ಗುರುವಾರ ನಡೆದ ಎಸ್ಸೆಸ್ಸೆಲ್ಸಿ ಪ್ರಥಮ ಭಾಷಾ ಪರೀಕ್ಷೆಗಳು ಸಾಮಾಜಿಕ ಸುರಕ್ಷಿತ ವಾತಾವರಣದಲ್ಲಿ ಅಚ್ಚುಕಟ್ಟಾಗಿ ನಡೆದಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಇಂದಿನ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದ ಅವರು, ಆರನೇ ದಿನವಾದ ಗುರುವಾರ ನಡೆದ ಕನ್ನಡ ಸೇರಿದಂತೆ ಪ್ರಥಮ ಭಾಷಾ ಪರೀಕ್ಷೆಗಳಿಗೆ ನೊಂದಾಯಿತ 7,78,618 ವಿದ್ಯಾರ್ಥಿಗಳ ಪೈಕಿ 7,64,006 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟಾರೆ ಶೇ. 98.12ರಷ್ಟು ಇಂದು ಹಾಜರಾತಿ ಇದೆ. 14,612 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವಿಷಯದ ಪರೀಕ್ಷೆಗೆ ಕಳೆದ 2018-19ನೇ ಸಾಲಿಗೆ 7,75,988 ವಿದ್ಯಾರ್ಥಿಗಳ ಪೈಕಿ 7,67,756 ವಿದ್ಯಾರ್ಥಿಗಳು ಹಾಜರಾಗಿದ್ದು, 8232 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಶೇ. 98.93 ಹಾಜರಾತಿ ಇತ್ತು ಎಂದು ಅವರು ತಿಳಿಸಿದ್ದಾರೆ.

ಮೊದಲ ಬಾರಿಗೆ 7,44,843 ಶಾಲಾ ವಿದ್ಯಾರ್ಥಿಗಳು ಹಾಗೂ 20,957 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಂಟೈನ್ಮೆಂ2ಟ್ ಪ್ರದೇಶಗಳ 3890 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡೇತರ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 670 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ 04 ಪ್ರಕರಣಗಳು ನಡೆದಿದ್ದು, ಅವರನ್ನು ಪರೀಕ್ಷೆಯಿಂದ ಡಿಬಾರ್ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಸರ್ಕಾರಿ/ಖಾಸಗಿ ವಸತಿ ನಿಲಯಗಳಲ್ಲಿ ಇದ್ದು 1448 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯಗಳಿಂದ 639 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದ್ದು, 45 ವಿದ್ಯಾರ್ಥಿಗಳು ಗೈರು ಹಾಜರಿಯಾಗಿ 594ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 12644 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದು, 12540 ವಿದ್ಯಾರ್ಥಿಗಳು ಹಾಜರಾಗಿದ್ದರೆ, 104 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಹೋಂ ಕ್ವಾರಂಟೈನಲ್ಲಿರುವ ಹಾಗೂ ಕೋವಿಡ್ ಪಾಸಿಟೀವ್ ಎಂದು ಗುರುತಿಸಲಾದ ವಿದ್ಯಾರ್ಥಿಗಳಿಗೆ ಈಗಿನ ಪರೀಕ್ಷೆಯನ್ನು ಬರೆಯುವುದರಿಂದ ವಿನಾಯ್ತಿ ನೀಡಲಾಗಿದೆ. ಈ ಎಲ್ಲರಿಗೂ ಸಕಾರಣದ ಆಧಾರದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾ ಕೇಂದ್ರಕ್ಕೆ 3212 ಬಸ್ ಹಾಗೂ ಇತರೆ ವಾಹನಗಳನ್ನು ಒಪ್ಪಂದದ ಮೇರೆಗೆ ಪಡೆದು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ಭೇಟಿ:

ಗುರುವಾರ ತುಮಕೂರು, ಮಧುಗಿರಿ, ಬೆಂಗಳೂರು ಗ್ರಾಮಾಂತರ ಶೈಕ್ಷಣಿಕ ವಿವಿಧ ತಾಲೂಕುಗಳ ತಾಲೂಕುಗಳ 13 ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಅಲ್ಲೆಲ್ಲಾ ಅಚ್ಚುಕಟ್ಟಾದ ವ್ಯವಸ್ಥೆಗಳನ್ನು ಮಾಡಲಾಗಿದೆ. ಮಕ್ಕಳು ನೆಮ್ಮದಿ ಮತ್ತು ಆಹ್ಲಾದಕರ ವಾತಾವರಣದಲ್ಲಿ ಪರೀಕ್ಷೆ ಬರೆಯುತ್ತಿದ್ದುದು ಕಂಡುಬಂದಿದೆ ಎಂದು ಸಚಿವರು ತಿಳಿಸಿದ್ದಾರೆ.

ಇಂದಿನ ಪರೀಕ್ಷೆಯ ಪ್ರಮುಖ ಸಂಗತಿಗಳು:

ಇಂದಿನ ಸಮಾಜ ವಿಜ್ಞಾನ ಪರೀಕ್ಷೆಯ ಸಂದರ್ಭದಲ್ಲಿ ಅಲ್ಲಲ್ಲಿ ಕಂಡು ಬಂದ ಸಂಗತಿಗಳನ್ನು ಸಚಿವರು ವಿವರಿಸಿದರು:

• ಕೊಪ್ಪಳ ಜಿಲ್ಲೆಯ ಕಾರಟಗಿಯ ಶರಣಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಯಾಗಿದ್ದ ಕೋವಿಡ್ ಸೋಂಕು ದೃಢಪಟ್ಟ ವಿದ್ಯಾರ್ಥಿಯೊಂದಿಗೆ ಆ ಕೊಠಡಿಯಲ್ಲಿ ಪರೀಕ್ಷೆಗೆ ಹಾಜರಾಗಿದ್ದ 17 ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆಯಲ್ಲಿ ನೆಗೆಟೀವ್ ಫಲಿತಾಂಶ ಬಂದಿದ್ದು, ಅವರೆಲ್ಲ ಪ್ರತ್ಯೇಕ ಕೊಠಡಿಯಲ್ಲಿ ಇಂದು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
• ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ನೂತನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ನಂದೀಶ್ ಕುಮಾರನ ತಾಯಿ ಕ್ಯಾನ್ಸರ್ ರೋಗದಿಂದಾಗಿ ದಿನಾಂಕ 30-06-2020ರಂದು ನಿಧನರಾಗಿದ್ದರು. ಆದರೂ ಆ ವಿದ್ಯಾರ್ಥಿ ಮುಂದಿನ ಎಲ್ಲ ಪರೀಕ್ಷೆಗಳಿಗೆ ಹಾಜರಾಗುವ ಮೂಲಕ ಧೈರ್ಯ ತೋರಿದ್ದಾನೆ ಎಂದು ಸಚಿವರು ವಿವರಿಸಿದರು.
• ಕಲಬುರಿಗಿ ಜಿಲ್ಲೆಯ ಜೇವರ್ಗಿ ಬಳಿ ಸೇತುವೆ ಕುಸಿದಿದ್ದು, ಪರೀಕ್ಷೆಗೆ ಬರಬೇಕಾಗಿದ್ದ ಮಕ್ಕಳಿಗೆ ತೊಂದರೆಯಾಗಿ ಆಚೆಯೇ ನಿಲ್ಲುವಂತಾಗಿತ್ತು. ಈ ಸಂದರ್ಭದಲ್ಲಿ ಸಕಾಲಕ್ಕೆ ಅಗ್ನಿಶಾಮಕ ದಳದವರು ಬಂದು ತಾವೇ ತಮ್ಮ ಅಲ್ಯೂಮಿನಿಯಂನ ದೊಡ್ಡ ಏಣಿ ಮೂಲಕ ತಾತ್ಕಾಲಿಕ ಸೇತುವೆ ನಿರ್ಮಿಸಿ ಮಕ್ಕಳಿಗೆ ಅನುಕೂಲ ಮಾಡಿಕೊಟ್ಟರು ಎಂದು ಅವರು ಹೇಳಿದರು.

2879 ಪರೀಕ್ಷಾ ಕೇಂದ್ರಗಳು:
ಒಟ್ಟಾರೆಯಾಗಿ ಇಂದು 2879 ಪರೀಕ್ಷಾ ಕೇಂದ್ರಗಳು ಮತ್ತು 330 ಬ್ಲಾಕ್ ಪರೀಕ್ಷಾ ಕೇಂದ್ರಗಳಲ್ಲಿ ಪ್ರಥಮ ಭಾಷಾ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿದೆ.
ಆರು ದಿನಗಳ ಪರೀಕ್ಷಾ ಪ್ರಕ್ರಿಯೆಗಳು ಮುಕ್ತಾಯಗೊಂಡಿದ್ದು, ತೃತೀಯ ಭಾಷಾ ಪತ್ರಿಕೆಗಳ ಪರೀಕ್ಷೆ ಮಾತ್ರವೇ ಬಾಕಿಯಿರುತ್ತವೆ. ಮಕ್ಕಳು ಯಾವುದೇ ಆತಂಕವಿಟ್ಟುಕೊಳ್ಳದೇ ಮುಂದಿನ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದಲೇ ಬರೆಯಲೆಂದು ಸಚಿವರು ಆಶಿಸಿದ್ದಾರೆ.

- Call for authors -

LEAVE A REPLY

Please enter your comment!
Please enter your name here