ಬೆಂಗಳೂರು: ನೆರೆಯ ಆಂಧ್ರಪ್ರದೇಶದಲ್ಲಿ ಕೃಷಿಗೆ ಸಂಬಂಧಿಸಿದಂತೆ ವಿಪ್ರೋ ಸಂಸ್ಥೆ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತಿದೆ. ಇದೇ ಮಾದರಿಯಲ್ಲಿ ರಾಜ್ಯದಲ್ಲಿಯೂ ಕೆಲಸ ಮಾಡಲು ನಮ್ಮ ಸಂಸ್ಥೆ ಉತ್ಸುಕವಾಗಿದೆ ಎಂದು ವಿಪ್ರೋ ಅಧ್ಯಕ್ಷರಾದ ಅಜೀಂ ಪ್ರೇಮ್ಜೀ ತಿಳಿಸಿದರು.
ಖಾಸಗಿ ವಲಯ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂಬ ಮುಖ್ಯಮಂತ್ರಿಗಳ ಆಶಯಕ್ಕೆ ಸ್ಪಂದಿಸಿರುವ ವಿಪ್ರೋ ಕಂಪನಿ ಅಧ್ಯಕ್ಷರಾದ ಡಾ.ಅಜೀಂ ಪ್ರೇಮ್ಜೀ ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು.
ನಗರದಲ್ಲಿ ವಾಯು ಮಾಲಿನ್ಯ ನಿಯಂತ್ರಣದ ಕಾರ್ಯದಲ್ಲಿ ಸರ್ಕಾರದ ಜೊತೆಗೆ ಕೈಜೋಡಿಸುವುದಾಗಿ ತಿಳಿಸಿದ ಅಜಿಂ ಪ್ರೇಮ್ಜೀ, ಈ ಕಾರ್ಯದಲ್ಲಿ ಸಮನ್ವಯ ಸಾಧಿಸಿಲು ಸರ್ಕಾರದ ಪರವಾಗಿ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲು ಕೋರಿದರು.
ಇದಕ್ಕೆ ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿಗಳು ಅರಣ್ಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸುವುದಾಗಿ ತಿಳಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ವಿಪ್ರೋ ಈಗಾಗಲೇ ರಾಜ್ಯದ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡಿದೆ. ಪ್ರಗತಿಯ ಪ್ರಕ್ರಿಯೆಯಲ್ಲಿ ಸರ್ಕಾರದೊಂದಿಗೆ ಕೈಜೋಡಿಸಲು ಸಂಸ್ಥೆ ಸಿದ್ಧವಿದೆ ಎಂದರು.
ಬೆಂಗಳೂರಿನ ಸರ್ಜಾಪುರ ರಸ್ತೆಯ ಸ್ಥಿತಿಯ ಬಗ್ಗೆ ಅಜೀಂ ಪ್ರೇಮ್ಜೀ ಮುಖ್ಯಮಂತ್ರಿಗಳ ಗಮನ ಸೆಳೆದಾಗ, ಈಗಾಗಲೇ ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಸರ್ಜಾರಪುರ ರಸ್ತೆಯ ದುರಸ್ಥಿ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.









