ಬೆಂಗಳೂರು:ಬೆಂಗಳೂರು ನಗರ ಅಭಿವೃದ್ಧಿಗಾಗಿ ಜಾರಿಗೊಳಿಸುತ್ತಿರುವ ಯೋಜನೆ, ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ಇಂದು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಷಾ ಮತ್ತು ಬಿಪ್ಯಾಕ್ ಸ್ವಯಂ ಸೇವಾ ಸಂಸ್ಥೆಯೊಂದಿಗೆ ಬೆಂಗಳೂರು ನಗರ ಅಭಿವೃದ್ಧಿ ಕುರಿತು ಚರ್ಚಿಸಿದರು.
ಬೆಂಗಳೂರು ನಗರ ಎದುರಿಸುತ್ತಿರುವ ಟ್ರಾಫಿಕ್ ಸಮಸ್ಯೆ, ರಸ್ತೆಗಳ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ, ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಹಾಗೂ ಮೆಟ್ರೋ ಕಾಮಗಾರಿ ಕುರಿತು ಈ ಸಭೆಯಲ್ಲಿ ಚರ್ಚಿಸಲಾಯಿತು.
ಉಪ ಮುಖ್ಯಮಂತ್ರಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಪ್ರತಿ ತಿಂಗಳು ಪ್ರಗತಿ ಪರಿಶೀಲನಾ ಸಭೆ ನಡೆಸಿ, ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್, ಬಿಪ್ಯಾಕ್ನ ಸದಸ್ಯರು ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.









