ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ-ಕಾಲೇಜುಗಳು, ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಅಗತ್ಯ ಸೌಕರ್ಯ ಒದಗಿಸುವ ಸಂಬಂಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಯಿತು. ಸಭೆಯಲ್ಲಿ ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್, ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ತರಗತಿ ಕೊಠಡಿಗಳು, ಪ್ರಯೋಗಾಲಯ, ಶೌಚಾಲಯ, ಗ್ರಂಥಾಲಯ ಮತ್ತಿತರ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಹಣಕಾಸಿನ ಕೊರತೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.
ತಾವು ಹಿಂದೆ ಮುಖ್ಯಮಂತ್ರಿ ಯಾಗಿದ್ದಾಗ ಮಂಜೂರು ಮಾಡಿದ್ದ ಶಾಲೆ-ಕಾಲೇಜುಗಳಿಗೆ ಮೂಲ ಸೌಕರ್ಯದ ಕೊರತೆ ಎದುರಿಸುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು, ಕೂಡಲೇ ಸೌಲಭ್ಯ ಒದಗಿಸಲು ಸೂಚಿಸಿದರು.
ಶಾಲೆಗಳ ಮೂಲ ಸೌಕರ್ಯ ಒದಗಿಸಲು ಹಿರಿಯ ವಿದ್ಯಾರ್ಥಿಗಳ ನೆರವು ಪಡೆಯಲು ಪೂರಕವಾಗಿ ಹಿರಿಯ ವಿದ್ಯಾರ್ಥಿಗಳ ಸಂಘಗಳನ್ನು ಸ್ಥಾಪಿಸಲು ತೀರ್ಮಾನಿಸಲಾಯಿತು.









