ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿರುವ 11 ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಬ್ಯಾಕ್ವೇಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಪ್ರಮಾಣವಚನ ಭೋದಿಸಿದರು.
ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಸಿ.ಎಂ.ಇಬ್ರಾಹಿಂ, ಕೆ.ಗೋವಿಂದರಾಜ್, ಕೆ.ಹರೀಶ್ ಕುಮಾರ್, ಅರವಿಂದ ಕುಮಾರ್ ಬಿಜೆಪಿಯಿಂದ ಆಯ್ಕೆಯಾಗಿರುವ ಡಾ.ತೇಜಸ್ವಿನಿಗೌಡ, ರಘುನಾಥ್ ರಾವ್ ಮಲ್ಕಾಪುರೆ, ಎನ್.ರವಿಕುಮಾರ್, ಎಸ್.ರುದ್ರೆಗೌಡ, ಕೆ.ಪಿ.ನಂಜುಂಡಿ ಹಾಗೂ ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿರುವ ಎಸ್.ಎಲ್.ಧರ್ಮೇಗೌಡ, ಬಿ.ಎಂ.ಫಾರುಕ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಡಿಸಿಎಂ ಪರಮೇಶ್ವರ್, ವಿಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪ, ಸಚಿವರಾದ ಜಯಮಾಲಾ, ಕೃಷ್ಣಬೈರೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.









