ಬೆಂಗಳೂರು: ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಜನತಾ ದರ್ಶನದಲ್ಲಿ ಅರ್ಜಿ ಸಲ್ಲಿಸಿರುವ 250 ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಚಾಲನೆ ನೀಡಲಾಯಿತು.
ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಇದಕ್ಕಾಗಿಯೇ ನೇಮಕಗೊಂಡಿರುವ ತಂಡವು ವಿವಿಧ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ರಾಜ್ಯದ 30 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಜನಸಾಮಾನ್ಯರ ಸಮಸ್ಯೆಯನ್ನು ಆಲಿಸಲು ಸಮಯ ನಿಗದಿ ಮಾಡುವಂತೆ ಹಾಗೂ ಅಂಗವಿಕಲರು, ಬಡ ಹೆಣ್ಣು ಮಕ್ಕಳು, ನಿರುದ್ಯೋಗಿ ಯುವಕರ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಬಗೆಹರಿಸಲು ಸೂಚಿಸಿ ಇಂದು ಸುತ್ತೋಲೆ ಹೊರಡಿಸಲಾಗುವುದು ಎಂದು ತಿಳಿಸಿದರು.
ಈ ಕೆಲಸವನ್ನು ತಿಂಗಳಿಗೆ ಎರಡು ಬಾರಿ ಖುದ್ದು ಪರಿಶೀಲಿಸುವುದಾಗಿ ಮುಖ್ಯಮಂತ್ರಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಕಾರ್ಯರ್ಶಿಗಳಾಗಿ ನೇಮಕವಾಗಿರುವ ಪ್ರದಾನ ಕಾರ್ಯರ್ಶಿಗಳು ತಿಂಗಳಿಗೊಮ್ಮೆ ನೆನೆಗುದಿಗೆ ಬಿದ್ದಿರುವ ಸಮಸ್ಯೆಗಳನ್ನು ಪರಿಶೀಲಿಸಿ ಮುಖ್ಯ ಕಾರ್ಯದರ್ಶಿಗಳ ಮುಖಾಂತರ ನನ್ನ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ ಎಂದರು.









