ಬೆಂಗಳೂರು: ಜಯದೇವ ಹೃದ್ರೋಗ ಆಸ್ಪತ್ರೆ ಸುಲಭ ದರದಲ್ಲಿ ಜನಸಾಮಾನ್ಯರಿಗೆ ಆರೋಗ್ಯ ಸೌಲಭ್ಯವನ್ನು ನೀಡುತ್ತಿದ್ದು, ಸಂಸ್ಥೆಯು ಕರ್ನಾಟಕ ರಾಜ್ಯಕ್ಕೆ ಅಷ್ಟೇ ಅಲ್ಲ, ದೇಶಕ್ಕೇ ಮಾದರಿ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನಿಂಗ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಕುಮಾರಸ್ವಾಮಿ, ಸಂಸ್ಥೆಯ ಬೆಳವಣಿಗೆಗೆ ಜಯದೇವ ಆಸ್ಪತ್ರೆಯ ನಿರ್ದೇಶಕರಾದ ಡಾ.ಸಿ.ಎಸ್.ಮಂಜುನಾಥ್ ಅವರ ಕೊಡುಗೆ ಅಪಾರ ವೈದ್ಯರು, ಕೆಳಹಂತದ ಸಿಬ್ಬಂದಿ ನಡುವೆ ತಾರತಮ್ಯವಿಲ್ಲದೆ ಸಂಸ್ಥೆಯನ್ನು ಈ ಮಟ್ಟಕ್ಕೆ ತಂದಿದ್ದಾರೆ. 50 ಲಕ್ಷ ರೋಗಿಗಳಿಗೆ ಶ್ರೀಮಂತರು, ಬಡವರು ಎನ್ನುವ ಬೇಧವಿಲ್ಲದೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಜನಸಾಮಾನ್ಯರು ದುಡ್ಡಿಲ್ಲದೆ ಬಂದರೂ ಕೂಡ ನೇರವಾಗಿ ದಾಖಲು ಮಾಡಿಕೊಂಡು ಚಿಕಿತ್ಸೆ ಪ್ರಾರಂಭಿಸುವ ಏಕೈಕ ಆಸ್ಪತ್ರೆ ಜಯದೇವ. ಸರ್ಕಾರಿ ಆರೋಗ್ಯ ಸಂಸ್ಥೆಗಳಿಂದ ಉತ್ತಮವಾದ ಚಿಕಿತ್ಸೆ ದೊರೆಯಬೇಕು ಎಂಬ ಉದ್ದೇಶದಿಂದ ಕಿದ್ವಾಯಿಯಲ್ಲಿ ಬೋನ್ ಮ್ಯಾರೋ ಟ್ರಾನ್ಸ್ಪ್ಲಾಂಟ್ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ 12 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಅಂಗಾಂಗ ಕಸಿಗೆ ಸಹ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಹೇಳಿದರು.
ವೈದ್ಯರಿಗೆ ಎಲ್ಲಾ ರೀತಿಯ ರಕ್ಷಣೆ ಕೊಡಬೇಕಾದುದ್ದು ಸರ್ಕಾರದ ಜವಾಬ್ದಾರಿ. ವ್ಯಕ್ತಿ ಸತ್ತ ತಕ್ಷಣ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಆಸ್ಪತ್ರೆಗಳ ಮೇಲೆ ದಾಳಿ, ವೈದ್ಯರ ಮೇಲಿನ ಹಲ್ಲೆ ನಡೆಯುತ್ತಿರುವುದು ದುರದೃಷ್ಟಕರ. ಇದನ್ನು ತಡೆಯುವ ನಿಟ್ಟಿನಲ್ಲಿಯೂ ಸರ್ಕಾರ ಕ್ರಮಕೈಗೊಳ್ಳುತ್ತದೆ. ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಸಹ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್, ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ: ಸಿ.ಎಸ್.ಮಂಜುನಾಥ್, ಶಾಸಕಿ ಸೌಮ್ಯರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.









