ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಾಗದಂತೆ ಕ್ರಮ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ದಕ್ಷಿಣ ಕನ್ನಡ, ಜೂನ್ 30, ಬುಧವಾರ:ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರ ಖಾಲಿ ಹುದ್ದೆ ತುಂಬಿ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಚಾರ್ಮಾಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹೊಸ ಕಟ್ಟಡ ಹಾಗೂ ಕೊಕ್ಕಡದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ್ದು, ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. 250 ಪಿಎಚ್ ಸಿಗಳನ್ನು ಪ್ರಾಯೋಗಿಕವಾಗಿ ಮೇಲ್ದರ್ಜೆಗೇರಿಸಿ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ಆರೋಗ್ಯ ಸವಲತ್ತುಗಳನ್ನು ನೀಡುವ ಉದ್ದೇಶವಿದೆ. ಆಸ್ಪತ್ರೆಗಳ ಖಾಲಿ ಹುದ್ದೆ ತುಂಬಲು 1,763 ವೈದ್ಯರು ಹಾಗೂ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನಂತರ ಗುತ್ತಿಗೆ ಆಧಾರದಲ್ಲಿ ಒಂದು ವರ್ಷ ಕಡ್ಡಾಯ ಸೇವೆಯಡಿ 2,050 ವೈದ್ಯರ ನೇಮಕವಾಗಿದೆ. ಈ ಪೈಕಿ ಕನ್ನಡ ಜಿಲ್ಲೆಗೆ 26 ವೈದ್ಯರನ್ನು ನೀಡಲಾಗಿದೆ. ಹೊಸ ನೇಮಕಾತಿಯಲ್ಲಿ, 18 ತಜ್ಞರು, 40 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ದಕ್ಷಿಣ ಕನ್ನಡದ ಆಸ್ಪತ್ರೆಗಳಲ್ಲಿ ನೇಮಿಸಲಾಗಿದೆ. ಈ ಮೂಲಕ ರಾಜ್ಯದ ಪ್ರತಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ ಎಂದರು.

ಕೊಕ್ಕಡದಲ್ಲಿ 30 ಹಾಸಿಗೆಗಳ 4.8 ಕೋಟಿ ರೂ. ವೆಚ್ಚದ ಸಮುದಾಯ ಆರೋಗ್ಯ ಕೇಂದ್ರ ಉದ್ಘಾಟಿಸಲಾಗಿದೆ. ಇಲ್ಲಿಗೆ ಬೇಕಾದ ಸಲಕರಣೆಗಳನ್ನು ಒದಗಿಸಲಾಗುವುದು. ಕೆಐಒಸಿಎಲ್ ಸಂಸ್ಥೆಯಿಂದ ಹಾಸಿಗೆಗಳನ್ನು ಇಲ್ಲಿಗೆ ನೀಡಲಾಗಿದೆ. ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಬಡವರು ಇಲ್ಲಿ ಪಡೆಯಬಹುದು ಎಂದು ತಿಳಿಸಿದರು.

ಸಂಭವನೀಯ ಕೋವಿಡ್ 3 ನೇ ಅಲೆಗೆ ಪೂರಕವಾಗಿ *ರಾಜ್ಯದಲ್ಲಿ 153 ಮಕ್ಕಳ ತಜ್ಞರನ್ನು ನೇಮಿಸಲಾಗಿದೆ.* ತಾಲೂಕು ಆಸ್ಪತ್ರೆಗಳಿಗೆ ಕಳುಹಿಸಿರುವ ವೈದ್ಯರಿಗೆ ಮಕ್ಕಳ ಚಿಕಿತ್ಸೆ ಕುರಿತು ತರಬೇತಿ ನೀಡಲಾಗುವುದು. ನರ್ಸ್ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಲಾಗುತ್ತಿದೆ. ಜೊತೆಗೆ ಲಸಿಕಾಕರಣವೂ ಉತ್ತಮವಾಗಿ ನಡೆಯುತ್ತಿದೆ. ದಕ್ಷಿಣ ಕನ್ನಡದಲ್ಲೂ ಉತ್ತಮವಾಗಿ ನಡೆದಿದೆ. ಕೆಲ ದಿನಗಳಿಂದ ಲಸಿಕಾ ಅಭಿಯಾನ ಮಂದಗತಿಯಲ್ಲಿ ಸಾಗಿದೆ. ಮುಂದಿನ ತಿಂಗಳಿಂದ ಹೆಚ್ಚು ಲಸಿಕೆ ಕಳುಹಿಸಿಕೊಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವರು ತಿಳಿಸಿದ್ದಾರೆ ಎಂದರು.

ಶಾಲೆ, ಆರೋಗ್ಯ ಕೇಂದ್ರಗಳು ಗ್ರಾಮೀಣ ಪ್ರದೇಶಗಳಿಗೆ ಅಗತ್ಯವಾಗಿದೆ. ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ 32 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಾಂಪೌಂಡ್ ನಿರ್ಮಾಣ ನಡೆಯುತ್ತಿದೆ. ಮುಂದಿನ ವರ್ಷವೂ ಉಳಿದ ಕಾಮಗಾರಿ ನಡೆಯಲಿದೆ ಎಂದರು.

ಎಂಡೋಸಲ್ಫಾನ್ ಸಂತ್ರಸ್ತರಿಗೆ ಸೌಲಭ್ಯ:

ಎಂಡೋಸಲ್ಫಾನ್ ನಿಂದ ಜನರು ತೊಂದರೆಗೊಳಗಾಗಿದ್ದಾರೆ. 60% ಕ್ಕಿಂತ ಹೆಚ್ಚು ಅಂಗವೈಕಲ್ಯ ಇರುವವರಿಗೆ ತಿಂಗಳಿಗೆ 3,000 ರೂ. ನೀಡಲಾಗುತ್ತಿದೆ. 59% ವರೆಗೆ ಒಂದೂವರೆ ಸಾವಿರ, 25% ಗಿಂತ ಕಡಿಮೆ ಇರುವವರಿಗೆ ಕೆಲ ರಿಯಾಯಿತಿ ಸೌಲಭ್ಯ ನೀಡಲಾಗುತ್ತಿದೆ. ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡಲು ಯತ್ನಿಸಲಾಗುವುದು ಎಂದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಒಂದು ಕಾರ್ಯಕ್ರಮವಾಗಿದೆ. ಇದು ಕೆಲ ವರ್ಷಗಳವರೆಗೆ ಇದ್ದು, ನಂತರ ಮುಗಿಯುತ್ತದೆ. ಇದರಡಿ ಕೆಲಸಕ್ಕೆ ನೇಮಕ ಮಾಡುವಾಗಲೇ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿದೆ. ಅದರಲ್ಲಿ ಶಾಶ್ವತ ನೇಮಕ ಕಷ್ಟವಾಗುತ್ತದೆ. ಇದರಲ್ಲಿ ಶೇ.60 ಕೇಂದ್ರ ಹಾಗೂ ರಾಜ್ಯ ಶೇ.40 ಅನುದಾನ ನೀಡುತ್ತದೆ ಎಂದರು.

ಸಚಿವರು ಹೇಳಿದ ಇತರೆ ಅಂಶಗಳು:

ಆಶಾ ಕಾರ್ಯಕರ್ತರಿಗೆ ವಿಶೇಷ ಭತ್ಯೆ ನೀಡಲಾಗಿದೆ.ಕೋವಿಡ್ ಹೊಸ ವೈರಾಣು ಪತ್ತೆಗೆ ಮಂಗಳೂರಿನಲ್ಲಿ ಜೀನೋಮ್ ಸೀಕ್ವೆನ್ಸ್ ಲ್ಯಾಬ್ ರೂಪಿಸಲಾಗುತ್ತಿದೆ. ಜಿಲ್ಲೆಯಲ್ಲಿ ಪಡೆದ ಮಾದರಿಗಳಲ್ಲಿ 5% ರಷ್ಟು ಲ್ಯಾಬ್‍ಗೆ ಕಳುಹಿಸಿ, ಎಚ್ಚರ ವಹಿಸಲಾಗುತ್ತದೆ.ವೆನ್ ಲಾಕ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಹಾಗೂ ಉತ್ಕøಷ್ಟ ದರ್ಜೆಯ ಆಸ್ಪತ್ರೆಯಾಗಿಸುವ ಉದ್ದೇಶವಿದೆ.ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲಾಗುವುದು. ಬೆಳ್ತಂಗಡಿಯ ಪಡಂಗಡಿ ಗ್ರಾಮದಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣವಾಗುತ್ತಿದೆ.

ಇಂದಿನಿಂದ ಶಿಕ್ಷಕರ ವರ್ಗಾವಣೆಗೆ ಚಾಲನೆ : ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದ ಶಿಕ್ಷಕ ಸಮೂಹದ ಬಹುದಿನಗಳ ನಿರೀಕ್ಷೆಯಾಗಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಬುಧವಾರ ಅಧಿಸೂಚನೆ ಹೊರಡಿಸಲಾಗಿದ್ದು, ಶಿಕ್ಷಕರು ಕೌನ್ಸೆಲಿಂಗ್ ಮೂಲಕ ತಮಗೆ ಅನುಕೂಲವಾದ ಸ್ಥಳ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

2019-20ನೇ ಸಾಲಿನ ಸಾಮಾನ್ಯ ವರ್ಗಾವಣೆಗಳಲ್ಲಿನ ಕಡ್ಡಾಯ ವರ್ಗಾವಣೆ, ವಲಯ ವರ್ಗಾವಣೆಯ ಮೇಲೆ ಅಥವಾ ಸಮರ್ಪಕ ಮರು ಹಂಚಿಕೆಯ ಮೇರೆಗೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಂಬಂಧಿಸಿದಂತೆ ತಾಲೂಕಿನ ಹೊರಗೆ ಅಥವಾ ಪ್ರೌಢಶಾಲಾ ಶಿಕ್ಷಕರಿಗೆ ಸಂಬಂಧಿಸಿದಂತೆ ಜಿಲ್ಲೆಯ ಹೊರಗೆ ವರ್ಗಾವಣೆಗೊಂಡ ಶಿಕ್ಷಕರಿಗೆ ವರ್ಗಾವಣೆ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಾಲೂಕು ಇಲ್ಲವೇ ಜಿಲ್ಲೆಯೊಳಗೆ ಸ್ಥಳ ನಿಯುಕ್ತಿ ಪ್ರಯೋಜನ ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದರೊಂದಿಗೆ 2020-21ನೇ ಸಾಲಿನ ಮತ್ತು 2021-22ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಗಳೂ ನಡೆಯಲಿವೆ ಎಂದು ಅವರು ವಿವರಿಸಿದ್ದಾರೆ.

ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‍ನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಮತ್ತು ಪ್ರೌಢಶಾಲಾ ಶಿಕ್ಷಕರ ಕೌನ್ಸೆಲಿಂಗ್‍ನ್ನು ಇಲಾಖೆಯ ಆಯಾ ವಿಭಾಗೀಯ ಜಂಟಿ ನಿರ್ದೇಶಕರು ನಡೆಸಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಜೂ. 30ಕ್ಕೆ ಲಭ್ಯವಿರುವ ಖಾಲಿ ಹುದ್ದೆಗಳ ಮಾಹಿತಿಯನ್ನು ಜು. 12ಕ್ಕೆ ಪ್ರಕಟಿಸಲಾಗುತ್ತದೆ. 2019-20ರಲ್ಲಿ ತಾಲೂಕಿನಿಂದ/ಜಿಲ್ಲೆಯಿಂದ ಹೊರಗೆ ಕಡ್ಡಾಯ/ ಹೆಚ್ಚುವರಿ ಪ್ರಕ್ರಿಯೆಯಲ್ಲಿ ವರ್ಗಾವಣೆಗೊಂಡ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಪಟ್ಟಿಯನ್ನು ಜು. 19ಕ್ಕೆ, ಈಗಾಗಲೇ ವರ್ಗಾವಣೆಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿರುವ ಶಿಕ್ಷಕರ ಅಂತಿಮ ಪಟ್ಟಿಯನ್ನು ಜು. 22ರಂದು ಪ್ರಕಟಿಸಲಾಗುತ್ತದೆ. ಇದರ ಹೊರತಾದ ಆಸಕ್ತ ಶಿಕ್ಷಕರು ಜೂ. 23ರಿಂದ29ರೊಳಗೆ ಅರ್ಜಿ ಸಲ್ಲಿಸಬಹುದು. ಈ ಎಲ್ಲ ಶಿಕ್ಷಕರ ಕ್ರೂಢೀಕೃತ ತಾತ್ಕಾಲಿಕ ಪಟ್ಟಿಯನ್ನು ಆ. 02ರಂದು ಪ್ರಕಟಿಸಲಾಗುತ್ತದೆ. ಹಾಗೂ ಆಕ್ಷೇಪಣೆಗಳನ್ನು ಆ. 3ರಿಂದ 8ರವರೆಗೆ ಸಲ್ಲಿಸಬಹುದಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮೇಲಿನ ಪಟ್ಟಿಯಲ್ಲಿನ ಅರ್ಜಿಗಳನ್ನು ಆ. 10ರಿಂದ ಆ.15ರವರೆಗೆ ಪರಿಶೀಲಿಸಿ ಪುರಸ್ಕೃತ/ತಿರಸ್ಕೃತರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ತಿರಸ್ಕೃತ ಪಟ್ಟಿಯಲ್ಲಿನ ಅಹವಾಲುಗಳಿದ್ದರೆ ಆಯಾ ವಿಭಾಗೀಯ ಜಂಟಿ ನಿರ್ದೇಶಕರು ಆ. 17ರಿಂದ 21ರವರೆಗೆ ಆಲಿಸುವರು. ಆ. 30ರಂದು ಕೌನ್ಸೆಲಿಂಗ್ ಜೇಷ್ಠತಾ ಕ್ರಮಾಂಕದ ಪಟ್ಟಿಯನ್ನು ಪ್ರಕಟಿಸಿ ಆ. 31ರಿಂದ ಸೆ.2ವರೆಗೆ ಆಕ್ಷೇಪಣೆಗಳನ್ನು ಸ್ವೀಕರಿಸುವರು. ಸೆ. 6ರವರೆಗೆ ಆಕ್ಷೇಪಣೆಗಳ ಪರಿಶೀಲನೆ ನಡೆಯುವುದು. ಸೆ. 8ರಂದು ಅಂತಿಮ ಕೌನ್ಸೆಲಿಂಗ್ ಅರ್ಹತಾ/ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿ ಸೆ. 15ರಿಂದ ಪ್ರಾಥಮಿಕ ಮತ್ತು ಸೆ. 21ರಿಂದ ಪ್ರೌಢಶಾಲಾ ಶಿಕ್ಷಕರಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ. ಆಯಾ ವಿಭಾಗದ ವಿಭಾಗೀಯ ಜಂಟಿ ನಿರ್ದೇಶಕರು ವರ್ಗಾವಣಾ ಕುಂದುಕೊರತೆ ನಿವಾರಣಾಧಿಕಾರಿಯಾಗಿರುತ್ತಾರೆ ಎಂದು ಸಚಿವರು ಹೇಳಿದ್ದಾರೆ.

ಹೆಚ್ಚುವರಿ/ಕಡ್ಡಾಯ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಜು. 12ರಂದು ಆರಂಭವಾಗಿ ಕೌನ್ಸೆಲಿಂಗ ಸೆ. 21ರಂದು ಮತ್ತು 2020-21ನೇ ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಜು. 27ರಂದು ಆರಂಭವಾಗಿ 2022ರ ಜನವರಿ 14ರಂದು ಕೌನ್ಸೆಲಿಂಗ್ ನಡೆಯಲಿದೆ ಎಂದು ಸಚಿವರು ವಿವರಿಸಿದ್ದಾರೆ.

2020-21ನೇ ಸಾಲಿನ ಸಾಮಾನ್ಯ ವರ್ಗಾವಣೆ:
2020-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಸೇರಿದಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರು/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತ್ತು ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆ ಸಹ ಕೌನ್ಸೆಲಿಂಗ್ ಮೂಲಕ ನಡೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದರಲ್ಲಿ ತೀವ್ರ ಅನಾರೋಗ್ಯ, ವಿಕಲಚೇತನ ಶಿಕ್ಷಕರು, ವಿಧವೆ/ವಿಧುರ/ವಿಚ್ಛೇದಿತ ಶಿಕ್ಷಕ/ಶಿಕ್ಷಕಿ, ಮೃತ ಸೈನಿಕರ ಶಿಕ್ಷಕ ಪತಿ ಅಥವಾ ಪತ್ನಿ, ಕೇಂದ್ರ/ರಾಜ್ಯ ಸರ್ಕಾರ ಇಲ್ಲವೇ ಅನುದಾನಿತ ಶಿಕ್ಷಣ ಸಂಸ್ಥೆ ನೌಕರರನ್ನು ಮದುವೆಯಾಗಿರುವ ಶಿಕ್ಷಕ/ಶಿಕ್ಷಕಿಯರಿಗೆ ವರ್ಗಾವಣೆಯಲ್ಲಿ ಅವಕಾಶವಿರಲಿದ್ದು, ಇದಕ್ಕಾಗಿ ಅವರು ಅರ್ಹ ಪೂರಕ ದಾಖಲೆಗಳನ್ನು ಒದಗಿಸಬೇಕಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದಕ್ಕಾಗಿ ಪ್ರತ್ಯೇಕ ವರ್ಗಾವಣಾ ವೇಳಾಪಟ್ಟಿಯನ್ನು ಆಯಾ ಬಿಇಒ ಮತ್ತು ಡಿಡಿಪಿಐ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.

2020-21ನೇ ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಜು. 27ರಿಂದ ಆರಂಭವಾಗಿ 2022ರ ಫೆ. 26ರವರೆಗೆ ಕೌನ್ಸೆಲಿಂಗ್ ನಡೆಯಲಿದೆ.

ಎಲ್ಲ ಅಡೆತಡೆಗಳನ್ನು ನಿವಾರಿಸಿ ಕೊನೆಗೂ ವರ್ಗಾವಣಾ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಶಿಕ್ಷಕರು ಸಹಕಾರ ನೀಡುವ ಮೂಲಕ ಇದರ ಅನುಕೂಲತೆ ಪಡೆದುಕೊಳ್ಳಬೇಕೆಂದು ರಾಜ್ಯದ ಶಿಕ್ಷಕರ ಸಮೂಹದಲ್ಲಿ ಸುರೇಶ್ ಕುಮಾರ್ ಕೋರಿದ್ದಾರೆ.

ಜು. 5ರಿಂದ ಸಂವೇದಾ ತರಗತಿಗಳ ಆರಂಭ :
ಬೆಂಗಳೂರು: ಕೋವಿಡ್-19ರ ಸೋಂಕಿನಿಂದಾಗಿ 2021-22ನೇ ಸಾಲಿನ ಭೌತಿಕ ತರಗತಿಗಳು ಆರಂಭ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ದೂರದರ್ಶನ ಚಂದನ ವಾಹಿನಿಯಲ್ಲಿ ಜು. 5ರಿಂದ ಸಂವೇದಾ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮಗಳು ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದ ಎಲ್ಲ ಶಿಕ್ಷಕರು ಸದರಿ ವೇಳಾಪಟ್ಟಿಯನ್ನು ತಮ್ಮಶಾಲೆಯ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ತಲುಪಿಸಿ ಅವರೊಂದಿಗೆ ಸಮನ್ವಯ ಸಾಧಿಸಿ ನಿಗದಿತ ಸಮಯದಲ್ಲಿ ನಿಗದಿತ ತರಗತಿಯ ವಿದ್ಯಾರ್ಥಿಗಳು ಸಂವೇದಾ ತರಗತಿಗಳನ್ನು ವೀಕ್ಷಿಸುವಂತೆ ಕ್ರಮ ಕೈಗೊಂಡು ನಂತರ ಪ್ರತಿಯೊಬ್ಬ ವಿದ್ಯಾರ್ಥಿಯ ಮೌಲ್ಯಮಾಪನ ವಿವರಗಳನ್ನು ನಿರ್ವಹಿಸಲಿದ್ದಾರೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾವುದೇ ವಿದ್ಯಾರ್ಥಿಗೆ ದೂರದರ್ಶನ ವೀಕ್ಷಿಸಲು ಅವಕಾಶದ ಕೊರತೆಯಿದ್ದಲ್ಲಿ ಆಯಾ ಶಾಲೆಯ ಶಿಕ್ಷಕರು ಎಸ್‍ಡಿಎಂಸಿ ಸದಸ್ಯರ ನೆರವು ಪಡೆದು ವಿದ್ಯಾರ್ಥಿಗೆ ದೂರದರ್ಶನ ವೀಕ್ಷಿಸಲು ಅನುಕೂಲ ಮಾಡುವುದು ಮತ್ತು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ವಿದ್ಯಾಥಿ೵ಗಳ ಕಲಿಕೆಯನ್ನು ಪರಿಣಾಮಕಾರಿಗೊಳಿಸಬೇಕೆಂದು ಕಲ್ಪಿಸಬೇಕೆಂದು ಅವರು ತಿಳಿಸಿದ್ದಾರೆ.

1ರಿಂದ 7ನೇ ತರಗತಿಗಳಿಗೆ ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ಮತ್ತು 8ರಿಂದ 10ನೇ ತರಗತಿವರೆಗೆ ಬೆಳಗ್ಗೆ 8ರಿಂದ ಸಂಜೆ 4.30ರವರೆಗೆ ನಡೆಯಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.ಮಕ್ಕಳು ಸಂವೇದಾ ತರಗತಿಗಳ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಚಿವರು ಕೋರಿದ್ದಾರೆ.

6 ತಿಂಗಳಲ್ಲಿ 1,242 ಸಹಾಯಕ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ನೇರ ನೇಮಕ ಪೂರ್ಣ: ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಬೆಂಗಳೂರು: ಶೈಕ್ಷಣಿಕ ವ್ಯವಸ್ಥೆಯ ಸುಧಾರಣೆಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರಕಾರವು ಇನ್ನು ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂಶುಪಾಲರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಪ್ರಕಟಿಸಿದರು.

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂದರ್ಶನ ಇಲ್ಲದೆಯೇ ಲಿಖಿತ ಪರೀಕ್ಷೆ ಮೂಲಕವೇ ಇಷ್ಟೂ ಹುದ್ದೆಗಳನ್ನು ತುಂಬಲಾಗುತ್ತಿದೆ. ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ಆರು ತಿಂಗಳ ಒಳಗಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದಲ್ಲದೆ, ಎಲ್ಲ ಪ್ರಕ್ರಿಯೆ ಪಾರದರ್ಶಕವಾಗಿರುತ್ತದೆ. ಅರ್ಹತೆ ಆಧಾರದ ಮೇಲೆಯೇ ಇಡೀ ನೇಮಕಾತಿ ಆಗಲಿದೆ ಎಂದು ಡಿಸಿಎಂ ಹೇಳಿದರು.

2009ರ ನಂತರ ಪ್ರಾಂಶುಪಾಲರನ್ನು ನೇಮಕಾತಿ ಮಾಡಿರಲಿಲ್ಲ. ಇದಕ್ಕೆ 55 ವರ್ಷ ವಯೋಮಿತಿ ಇದೆ. ಅದೇ 2017ರ ನಂತರ ಸಹಾಯಕ ಪ್ರಾಧ್ಯಾಪಕರ ನೇಮಕವೂ ಆಗಿರಲಿಲ್ಲ ಎಂದ ಅವರು, ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ 500 ಅಂಕಕ್ಕೆ ನಡೆಯುತ್ತದೆ. (ಕನ್ನಡ 100, ಇಂಗ್ಲಿಷ್‌ 100, ಜಿಕೆ 50 ಆಯ್ಕೆ ವಿಷಯಗಳಿಗೆ 250 ಅಂಕ ಇರುತ್ತದೆ.) ಪ್ರಾಂಶುಪಾಲರ ಆಯ್ಕೆ ಪರೀಕ್ಷೆ 100 ಅಂಕ ಇರುತ್ತದೆ. ಎಲ್ಲ ಪ್ರಶ್ನೆಗಳು ಬಹುಆಯ್ಕೆ ಮಾದರಿಯಲ್ಲಿ ಇರುತ್ತವೆ. ಪ್ರಾಥಮಿಕ ಅರ್ಹತೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ ಎಂದು ಅವರು ಮಾಹಿತಿ ನೀಡಿದರು.

ಅರ್ಹತೆಯನ್ನು ಹೊರತುಪಡಿಸಿ ಬೇರೆ ಯಾವ ಮಾನದಂಡವೂ ಈ ನೇಮಕಾತಿಯಲ್ಲಿ ಇರುವುದಿಲ್ಲ. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ ಈ ಕ್ರಮ ವಹಿಸಲಾಗಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಬ್ಯಾಗ್ ನಲ್ಲಿ ಸಿಗಲಿದೆ ಮರಳು:ದೇಶದಲ್ಲೇ ವಿನೂತನ ಯೋಜನೆ

ಬೆಂಗಳೂರು, ಜೂನ್ 30: ದೇಶದಲ್ಲೇ ಪ್ರಪ್ರಥಮ ಬಾರಿಗೆ ಗ್ರಾಹಕರಿಗೆ ಸುಲಭವಾಗಿ ಸಿಗುವಂತೆ ಅನುಕೂಲವಾಗಲು ಇನ್ನು ಮುಂದೆ ಬ್ಯಾಗ್ ಗಳಲ್ಲಿ ಮರಳು ಮಾರಾಟ ಮಾಡುವ ವಿನೂತನ ಯೋಜನೆಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಆರಂಭಿಸಲಿದೆ.

ಬ್ಯಾಗ್ ಗಳಲ್ಲಿ ಮಾರಾಟ ಮಾಡುವ ಉದ್ದೇಶವೇನೆಂದರೆ ಸರಕಾರದ ವತಿಯಿಂದಲೇ ಕೈಗೆಟುಕವ ದರದಲ್ಲಿ ಜನಸಾಮಾನ್ಯರು ಹಾಗೂ ಎಲ್ಲಾ ವರ್ಗದವರಿಗೂ ಮರಳು ಸಿಗಲಿದ್ದು ಇದರ ಪ್ರಸ್ತಾವನೆಯು ಸಹಾ ಸಿದ್ದವಾಗಿದೆ. ಇದರಿಂದಾಗಿ ಮನೆ ಕಟ್ಟುವವರು ಹಾಗೂ ಇತರರಿಗೆ ಸುಲಭ ಮಾರ್ಗದಲ್ಲಿ ಮರಳು ಲಭ್ಯವಾಗಲಿದೆ.

ಬುಧವಾರ ವಿಕಾಸಸೌಧದಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ*ಅವರು ಕಲ್ಲು ಗಣಿಗಾರಿಕೆ ಮರಳು ಕುರಿತು ಜಿಲ್ಲಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಮದ್ಯವನ್ನು ಯಾವ ರೀತಿ ಕರ್ನಾಟಕ ರಾಜ್ಯ ಪಾನೀಯ ನಿಗಮದ ಮೂಲಕ ಮಾರಾಟ ಮಾಡುತ್ತಿದಿಯೋ ಅದೇ ಮಾದರಿಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ತನ್ನದೇಯಾದ ಸಂಸ್ಥೆಯ ಮೂಲಕ ಬ್ಯಾಗ್ ಗಳಲ್ಲಿ ಮರಳು ಮಾರಾಟ ಮಾಡಲು ಉದ್ದೇಶಿಸಿದೆ ಎಂದು ಪ್ರಕಟಿಸಿದರು.

ಮರಳು ಸಾಗಾಣಿಕೆ ಮಾಡುವ ವೇಳೆ ಕನಿಷ್ಟ ಶೇ.25 ರಿಂದ 30ರಷ್ಟು ಮರಳು ಅನುಪಯುಕ್ತವಾಗುತ್ತಿತ್ತು. ಇದನ್ನು ತಪ್ಪಿಸುವ ಉದ್ದೇಶದಿಂದ 50 ಕೆಜಿಯ ಬ್ಯಾಗ್, 1 ಟನ್ ಹಾಗೂ ಅದಕ್ಕಿಂತ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕರು ಮರಳನ್ನು ಖರೀದಿಸಬಹುದು ಎಂದು ಹೇಳಿದರು.

ಪ್ರಾಯೋಗಿಕವಾಗಿ ರಾಜ್ಯದ ಐದು ಕಡೆ ಈ ಘಟಕಗಳನ್ನು ಪ್ರಾರಂಭ ಮಾಡಲಾಗುವುದು. ಮರಳು ಮಾರಾಟ ಮಾಡಲು ಬ್ಯಾಗ್‍ಗಳನ್ನು ಸಿದ್ಧಪಡಿಸುವುದು, ಸಾಗಾಣಿಕೆ ಸೇರಿದಂತೆ ಎಲ್ಲ ರೀತಿಯ ತರಬೇತಿಯನ್ನು ಸಂಬಂಧಪಟ್ಟವರಿಗೆ ನೀಡಲಿದ್ದೇವೆ ಎಂದು ತಿಳಿಸಿದರು.

ಬ್ಯಾಗ್ ಮೂಲಕ ಮಾರಾಟ ಮಾಡುವಾಗ ಎ, ಬಿ ಮತ್ತು ಸಿ ಶ್ರೇಣಿ ಎಂದು ವರ್ಗೀಕರಣ ಮಾಡುತ್ತೇವೆ. ಮೊದಲು ಸ್ಟಾಕ್ ಯಾರ್ಡ್‍ಗಳಲ್ಲಿ ಪ್ರತ್ಯೇಕಗೊಳಿಸಿ ನಂತರ ಅದನ್ನು ಕೈಗೆಟಕುವ ದರದಲ್ಲಿ ವಿತರಣೆ ಮಾಡಲಿದ್ದೇವೆ ಎಂದು ತಿಳಿಸಿದರು.

ಮರಳುಗಾರಿಕೆಯನ್ನು ಕೇವಲ ಆರು ತಿಂಗಳು ಮಾತ್ರ ನಡೆಸಬಹುದು. ನದಿಗಳಲ್ಲಿ ನೀರು ಸಂಗ್ರಹಣೆಯಾದರೆ ಮರಳು ತೆಗೆಯಲು ಅವಕಾಶವಿರುವುದಿಲ್ಲ. ಬ್ಯಾಗ್‍ಗಳಲ್ಲಿ ಮರಳು ಸಂಗ್ರಹಿಸಿಟ್ಟುಕೊಂಡರೆ, ವರ್ಷ ಪೂರ್ತಿ ಬಳಕೆ ಮಾಡಬಹುದು ಎಂದು ಸಲಹೆ ಮಾಡಿದರು.

ಬ್ಯಾಗ್ ಗಳಲ್ಲಿ ಮರಳು ಸಂಗ್ರಹಣೆಯಾದರೆ
ಸಾರ್ವಜನಿಕರಿಗೆ ಗುಣಮಟ್ಟದ ಮರಳು ಸಿಗಲಿದೆ. ತಮ್ಮ ವಾಹನಗಳಲ್ಲಿ ಎಲ್ಲಿಗೆ ಬೇಕಾದರೂ ಸುಲಭವಾಗಿ ಸಾಗಿಸಬಹುದು.ಇದರಿಂದ ಸಾಗಾಣಿಕೆ ವೆಚ್ಚವು ಕಡಿಮೆಯಾಗಲಿದೆ ಎಂದರು.

ವರ್ಷಪೂರ್ತಿ ಮರಳು ಸಿಗದ ಕಾರಣ ಮಾರುಕಟ್ಟೆಯಲ್ಲಿ ಮರಳಿನ ದರವು ದುಪ್ಪಟ್ಟಾಗುತ್ತಿತ್ತು. ಈಗ ಇಂತಹುದನ್ನು ತಪ್ಪಿಸಲು ಈ ಮಾರ್ಗೋಪಾಯ ಕಂಡುಕೊಳ್ಳಲಾಗಿದೆ ಎಂದು ಹೇಳಿದರು. ಬ್ಯಾಗ್‍ಗಳಲ್ಲಿ ಮರಳನ್ನು ಸಂಗ್ರಹಿಸಿಟ್ಟರೆ ಯಾವಾಗ ಬೇಕಾದರೂ ವಿತರಣೆ ಮಾಡಬಹುದು. ಇದಕ್ಕೆ ದರ ಕಡಿಮೆ ಇರುತ್ತದೆ. ಇದಕ್ಕೆ 50ರೂ. ಖರ್ಚಾಗಬಹುದು ಎಂದರು.

5 ಲಕ್ಷಕ್ಕಿಂತ ಕಡಿಮೆ ದರದಲ್ಲಿ ಮನೆ ಕಟ್ಟಿಸಿಕೊಳ್ಳುವವರಿಗೆ ಯಾವುದೇ ರೀತಿಯ ರಾಜಧನ ಕಟ್ಟಿಸಿಕೊಳ್ಳುವುದಿಲ್ಲ. ಬಡವರು, ಬಡತನ ರೇಖೆಗಿಂತ ಕೆಳಗಿನವರು ಗ್ರಾಪಂ ಮಟ್ಟದಲ್ಲಿ ಆಶ್ರಯ ಮನೆ ಕಲ್ಪಿಸಿಕೊಳ್ಳುವವರಿಗೆ ಉಚಿತ ಮರಳನ್ನು ವಿತರಿಸಿದ್ದೇವೆ ಎಂದು ತಿಳಿಸಿದರು.

ಬ್ಲಾಕ್‍ಗಳನ್ನು ಗುರುತಿಸಿ:

ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಮತ್ತು ಅರಣ್ಯ ಉಪಸಂರಕ್ಷಣಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಚಿವ ಮುರುಗೇಶ್ ನಿರಾಣಿ ಅವರು ತತ್‍ಕ್ಷಣವೇ ನದಿ ಪಾತ್ರಗಳಲ್ಲಿ ಒಂದು, ಎರಡು, ಮೂರನೆ ಶ್ರೇಣಿಯ ಮರಳು ಬ್ಲಾಕ್‍ಗಳನ್ನು ಗುರುತಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ಕೊಟ್ಟರು.

ಕೆಎಸ್‍ಎಂಸಿಎಲ್, ಹೆಚ್‍ಜಿಎಂಎಲ್ ವತಿಯಿಂದ ನಾಲ್ಕು, ಐದು ಮತ್ತು ಆರನೆ ಶ್ರೇಣಿಯ ನದಿ ಪಾತ್ರಗಳಲ್ಲಿ ಮರಳು ಗಣಿಗಾರಿಕೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಮರಳು ಬ್ಲಾಕ್‍ಗಳನ್ನು ಗುರುತಿಸಿ ಅಧಿಸೂಚನೆ ಹೊರಡಿಸಿ ಕಾರ್ಯಾದೇಶ ನೀಡಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಇದು ಏಕೆ ಸಾಧ್ಯವಾಗಿಲ್ಲ. ಕೂಡಲೇ ಬ್ಲಾಕ್ ಗುರುತಿಸುವ ಕಾರ್ಯ ಮಾಡಿ ಎಂದು ಸೂಚಿಸಿದರು.

ಡ್ರೋಣ್ ಮೂಲಕ ಸಮೀಕ್ಷೆ ನಡೆಸಬೇಕು. ಹೊಸದಾಗಿ ಟೆಂಡರ್ ಕರೆಯುವುದು ಅಥವಾ ಮರು ಟೆಂಡರ್ ಕರೆದಾದರೂ ಬ್ಲಾಕ್‍ಗಳನ್ನು ಗುರುತಿಸಬೇಕು. ಇಲ್ಲಸಸಲ್ಲದ ಸಬೂಬು ಹೇಳಬೇಡಿ ಎಂದು ನಿರಾಣಿ ತಾಕೀತು ಮಾಡಿದರು.

ಈಗಾಗಲೇ ನೂತನ ಮರಳು ನೀತಿ ಸಿದ್ದವಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆಸಿ ಅದಷ್ಟು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದೇವೆ. ಇದು ದೇಶಕ್ಕೆ ಮಾದರಿಯಾದ ನೀತಿ ಇದಾಗಲಿದೆ ಎಂದು ಅಭಿಪ್ರಾಯಪಟ್ಟರು.

 

ಬೆಂಗಳೂರನ್ನು ವಿಶ್ವದರ್ಜೆಯ ಹಸಿರು ನಗರವಾಗಿ ರೂಪಿಸಲು ನಮ್ಮ ಸರ್ಕಾರ ಬದ್ಧ- ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಜೂನ್ 30: ಬೆಂಗಳೂರಿನ ಜನರ ಜೀವನ ಮಟ್ಟದಲ್ಲಿ ಎಲ್ಲ ರೀತಿಯ ರೀತಿಯಲ್ಲಿಯೂ ಉತ್ಕøಷ್ಟತೆಯನ್ನು ಸಾಧಿಸುವ ಮೂಲಕ ಬೆಂಗಳೂರನ್ನು ವಿಶ್ವದರ್ಜೆಯ ನಗರವಾಗಿ ರೂಪಿಸುವುದರ, ಜೊತೆಗೆ ಹಸಿರು ಬೆಂಗಳೂರು ಎಂಬ ಹೆಗ್ಗಳಿಕೆಯನ್ನು ಕಾಪಾಡಿಕೊಳ್ಳಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಇಂದು “ಕಾಡುಗೋಡಿ ವೃಕ್ಷೋದ್ಯಾನ” , ಕನ್ನಮಂಗಲ “ಸಸ್ಯಶಾಸ್ತ್ರೀಯ ತೋಟ” ,ಕನ್ನಮಂಗಲ ಕೆರೆ ಉದ್ಘಾಟನಾ ಕಾರ್ಯಕ್ರಮ ಹಾಗೂ “ಎಲೆ ಮಲ್ಲಪ್ಪ ಶೆಟ್ಟಿ ಕೆರೆ” ಪರಿವೀಕ್ಷಣೆ-ಜನಪದರು ರಂಗ ಮಂದಿರ ಉದ್ಘಾಟನೆ ಸಮಾರಂಭಗಳಲ್ಲಿ ಪಾಲ್ಗೊಂಡ ಅವರು ನಂತರ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿದ್ದು, ಮೂಲಸೌಕರ್ಯ ಅಭಿವೃದ್ಧಿ, ಪರಿಸರ ಸಂರಕ್ಷಣೆ ಹಾಗೂ ಹಸರೀಕರಣ, ಸ್ವಚ್ಚತೆ ಹಾಗೂ ಸುಗಮ ಸೇವಾ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಪರಿಸರ ಸಂರಕ್ಷಣೆ, ಹಸಿರೀಕರಣಗಳ ಕಡೆ ಇಂದು ಬೆಂಗಳೂರು ಮತ್ತೊಂದು ದೊಡ್ಡ ಹೆಜ್ಜೆ ಇಟ್ಟಿದೆ ಎಂದರೆ ಅತಿಶಯೋಕ್ತಿಯಾಗಲಾರದು. ಕಾಡುಗೋಡಿಯ ಟ್ರೀ-ಪಾರ್ಕ್, ಕನ್ನಮಂಗಲದ ಸಸ್ಯೋದ್ಯಾನ, ಅಭಿವೃದ್ಧಿ ಪಡಿಸಲಾದ ಕನ್ನಮಂಗಲ ಕೆರೆ, ನಿಂಬೆಕಾಯಿಪುರದ ಗ್ರಾಮದ “ಜನಪದರು” ರಂಗಮಂದಿರವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ.ಕಾಡುಗೋಡಿಯಲ್ಲಿ ಅರಣ್ಯ ಇಲಾಖೆಯ ವತಿಯಿಂದ 22 ಎಕರೆಯಲ್ಲಿ ನಿರ್ಮಾಣವಾಗಿರುವ ಟ್ರೀ ಪಾರ್ಕ್ ಹಸಿರು ಬೆಂಗಳೂರು ನಿರ್ಮಾಣಕ್ಕೆ ಪೂರಕವಾಗಿದೆ ಎಂದರು.

ಬೆಂಗಳೂರು ಮಿಷನ್-2022ರಲ್ಲಿ ಬೆಂಗಳೂರು ನಾಗರಿಕರಿಗೆ ಉತ್ತಮ ಹಸಿರು ಪರಿಸರವನ್ನು ಒದಗಿಸುವ ನಮ್ಮ ವಚನಕ್ಕೆ ಬದ್ಧರಾಗಿರುವುದಕ್ಕೆ ಈ ವೃಕ್ಷೋದ್ಯಾನ ಸಾಕ್ಷಿಯಾಗಿದೆ. ಈ ವೃಕ್ಷೋದ್ಯಾನದಲ್ಲಿ ರಾಶಿವನ, ನಕ್ಷತ್ರವನ, ಹಾಗೂ ಔಷಧಿಯ ಸಸಿಗಳನ್ನು ನೆಡಲಾಗಿದ್ದು, ಸಾರ್ವಜನಿಕರ ವಿಹಾರಕ್ಕೆ ಅನುಕೂಲತೆಗಳು ಹಿರಿಯ ನಾಗರಿಕರಿಗೆ ಒಪನ್-ಜಿಮ್, ಮಕ್ಕಳಿಗೆ ಆಟದ ಅಂಗಳ ಹಾಗೂ ನೈಸರ್ಗಿಕ ಪಥಗಳ ನಿರ್ಮಾಣವಾಗಿರುವುದು ಈ ಭಾಗದ ಸಾವಿರಾರು ನಾಗರಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಬೆಂಗಳೂರು ಪೂರ್ವದ ಕನ್ನಮಂಗಲದಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ನಿರ್ಮಿಸಿರುವ 70ಎಕರೆ ಸಸ್ಯಶಾಸ್ತ್ರೀಯ ತೋಟ (ಮಿನಿ ಲಾಲ್‍ಬಾಗ್) ಇನ್ನು ಮುಂದೆ ಮಾಜಿ ಪ್ರದಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಯವರ ಸ್ಮರಣಾರ್ಥ ಅಟಲ್ ಬಿಹಾರಿ ಸಸ್ಯಶಾಸ್ತ್ರೀಯ ತೋಟ ಎಂದು ಕರೆಯಲ್ಪಡುತ್ತದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

ಉತ್ಕೃಷ್ಟ ತಳಿಯ ಹಲವು ಹಣ್ಣುಗಳ ಔಷಧಿಗಳ ಗಿಡಗಳು, ಅಲಂಕಾರಿಕಾ ಹಾಗೂ ಸುಗಂಧಿತ ಸಸ್ಯಗಳನ್ನು ಒಳಗೊಂಡ ಈ ಸಸ್ಯ ತೋಟವು ಜೀವ ವೈವಿಧ್ಯತೆಯ ತಾಣವಾಗಿದೆ ಎಂದು ಅವರು ಹೇಳಿದರು.

ಈಗಾಗಲೇ ಇರುವ ಸಸ್ಯ ಸಂಪತ್ತಿನ ಜೊತೆ, ನಾಗರಿಕರ ಅನುಕೂಲಕ್ಕಾಗಿ ಹಲವಾರು ಸೌಕರ್ಯಗಳನ್ನು ಅಭಿವ್ರದ್ಧಿ ಪಡಿಸಲಾಗಿದೆ. ವಾಯುವಿಹಾರಿಗಳ ಪಥ, ಕುಡಿಯುವ ನೀರಿನ ಘಟಕ, ಶೌಚಾಲಯಗಳು ಒಳಗೊಂಡಂತೆ ಹಲವು ಅಭಿವೃದ್ಧಿ ಕಾರ್ಯಗಳು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಈ ಸಸ್ಯಶಾಸ್ತ್ರೀಯ ತೋಟವು ಸಸ್ಯಕಾಶಿಯಾಗಿ ಸಾರ್ವಜನಿಕರಿಗೆ ಶುದ್ದ ಹವೆ, ಆರೋಗ್ಯವಾದ ಬದುಕು ನೀಡಲು ಸಹಾಯವಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅರಣ್ಯ ಇಲಾಖೆ ಸಿದ್ಧ ಮಾಡಿರುವ ಟ್ರೀ ಸೆನ್ಸಸ್ ಆಪ್ ಬಿಡುಗಡೆ ಮಾಡಿದರು.ಮಹದೇವಪುರದ ಬಿದರಹಳ್ಳಿ ಹೋಬಳಿಯಲ್ಲಿರುವ ಕನ್ನಮಂಗಲ ಕೆರೆಯನ್ನು ಉದ್ಘಾಟನೆ ಮಾಡಿರುವುದು ನನಗೆ ಸಂತೋಷ ತಂದಿದೆ ಎಂದ ಅವರು ಹದಿನೆಂಟು ಎಕರೆ ಪ್ರದೇಶದಲ್ಲಿರುವ ಕನ್ನಮಂಗಲ ಕೆರೆಯು ಸುಂದರವಾಗಿ ರೂಪುಗೊಂಡಿದೆ, ಸಚಿವರು ಅರವಿಂದ ಲಿಂಬಾವಳಿಯವರ ನೇತೃತ್ವದಲ್ಲಿ ಸ್ಥಳೀಯ ಸ್ವಯಂ ಸೇವಕ ನಿವಾಸಿಗಳ ಗುಂಪಿನ ಸಹಕಾರದೊಂದಿಗೆ ಹೊಸ ರೂಪ ಹೊಂದಿದೆ. ಸ್ಥಳೀಯ ನಿವಾಸಿಗಳು ಹಾಗೂ ಹಲವು ಸಂಸ್ಥೆಗಳು ಇಡೀ ಕೆರೆಯನ್ನು ಸ್ವಚ್ಚಗೊಳಿಸಿ ಅತಿಕ್ರಮಣವನ್ನು ನಿವಾರಿಸಿ ಅಂತರ್ಜಲ ಮಟ್ಟವನ್ನು ಏರಿಸಲು ಕ್ರಮ ಕೈಗೊಂಡಿರುವುದು ಶ್ಲಾಘನೀಯ, ಹಳ್ಳಿಗಳಿಗೆ ಅಂತರ್ಜಲದ ಮರುಪೂರಣವನ್ನು ಹೆಚ್ಚಸಲು ಈ ಕೆರೆ ನೆರವಾಗಲಿದೆ ಎಂದರು.

ಕೋವಿಡ್-19 ಎರಡನೇ ಅಲೆಯ ಸಂದರ್ಭದಲ್ಲಿ ಅರವಿಂದ ಲಿಂಬಾವಳಿಯವರ ಕಾರ್ಯದ ಬಗ್ಗೆ ಪ್ರಸ್ತಾಪಿಸಿದ ಅವರು, ಸಚಿವ ಲಿಂಬಾವಳಿ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಟ್ರೈಯಾಜ್ ಸೆಂಟರ್‍ಗಳು ಸ್ಥಾಪನೆ ಮಾಡಲು ವಹಿಸಿರುವ ಶ್ರಮ ಮತ್ತು ಜನರಿಗೆ ಕೋವಿಡ್ ಲಸಿಕೆ ಹಾಕಿಸುವ ಕಾರ್ಯದಲ್ಲಿ ತೋರಿರುವ ಬದ್ಧತೆ ಮತ್ತು ಈ ಭಾಗದ ಬಡ ಜನರಿಗೆ ಆಹಾರ ದಿನಸಿ/ ಕಿಟ್‍ಗಳನ್ನು ವಿತರಿಸುವಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ಶ್ರಮಿಸಿದ್ದಾರೆ. ಇದಕ್ಕಾಗಿ ಸಚಿವರನ್ನು ಹಾಗೂ ಇದರಲ್ಲಿ ಕೈಜೋಡಿಸಿದ ಎಲ್ಲಾ ಸಂಘ ಸಂಸ್ಥೆಗಳನ್ನು ನಾನು ಅಭಿನಂದಿಸುತ್ತೇನೆ ಎಂದ ಮುಖ್ಯ ಮಂತ್ರಿಗಳು ಇತರ ಜನಪ್ರತಿನಿಧಿ ಗಳಿಗೆ ಸಚಿವ ಅರವಿಂದ ಲಿಂಬಾವಳಿ ಅವರ ಅಭಿವೃದ್ಧಿ ಕಾರ್ಯಕ್ರಮಗಳು ಮಾದರಿಯಾಗಿದೆ ಎಂದು ಸಚಿವ ಲಿಂಬಾವಳಿ ಅವರ ಕಾರ್ಯವನ್ನು ಮುಕ್ತಕಂಠದಿಂದ ಪ್ರಶಂಸಿಸಿದರು .

ಈ ಭಾಗದ ಸಂಸ್ಕøತಿಯ ಪ್ರತೀಕವಾಗಿ ಸಿದ್ದಗೊಂಡು ನಿಂತಿರುವ ನಿಂಬೆಕಾಯಿಪುರದ ಗ್ರಾಮದ “ಜನಪದರು” ರಂಗಮಂದಿರವು ಈ ಭಾಗದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿ ಬೆಳೆಯಲಿ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಯೋಗದೊಂದಿಗೆ ರೂ.3.5 ಕೋಟಿ ವೆಚ್ಚದಲ್ಲಿ ಒಂದು ಎಕರೆ ವಿಶಾಲ ಜಾಗದಲ್ಲಿ ನಿರ್ಮಿಸಿರುವ ಈ ರಂಗಮಂದಿರ ಅತ್ಯಂತ ವಿಶಿಷ್ಟವಾದದ್ದು, ಏಕೆಂದರೆ ಭಾರತೀಯ ರಂಗಭೂಮಿ ಮಟ್ಟಿಗೆ ತಿರುಗು ರಂಗಮಂದಿರವನ್ನು (ರಿವಾಲ್ವಿಂಗ್ ಸ್ಟೇಜ್) ಹೊಂದಿರುವ ಏಕೈಕ ರಂಗಮಂದಿರ ಎಂಬ ಹೆಗ್ಗಳಿಕೆ ಇದರದ್ದಾಗಿದೆ ಎಂದು ಅವರು ರಂಗಮಂದಿರ ನಿರ್ಮಾಣ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಭಾ ಕಾರ್ಯಕ್ರಮದ ನಂತರ ಮಹದೇವಪುರ ಕ್ಷೇತ್ರದ ಮತ್ತೊಂದು ಹಳೆಯ ಮತ್ತು ಇತಿಹಾಸ ಪ್ರಸಿದ್ದವಾದ “ಎಲೆ ಮಲ್ಲಪ್ಪ ಶೆಟ್ಟಿ ಕೆರೆ” ಪರಿವೀಕ್ಷಣೆ ಮಾಡಿದ ಮುಖ್ಯಮಂತ್ರಿಗಳು 508 ಎಕರೆ ವಿಸ್ತೀರ್ಣದ ಈ ಕೆರೆಯನ್ನು ಬೆಂಗಳೂರು – ಮಿಷನ್-2022 ರ ಅಡಿಯಲ್ಲಿ ಅಭಿವೃದ್ಧಿ ಪಡಿಸುವುದರ ಬಗ್ಗೆ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಈ ಕುರಿತಂತೆ ಸಮಗ್ರವಾದ ಅಭಿವೃದ್ಧಿ ನೀಲ ನಕ್ಷೆ ಸಿದ್ಧಪಡಿಸಿ, ಶೀಘ್ರದಲ್ಲಿಯೇ ಕಾರ್ಯ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಸಚಿವ ಅರವಿಂದ ಲಿಂಬಾವಳಿ ಮಾತನಾಡಿ ಮಹದೇವಪುರ ಕ್ಷೇತ್ರವನ್ನು ಅಭಿವೃದ್ಧಿಯ ಜೊತೆಗೆ ಹಸಿರೀಕರಣ ಮಾಡಲು ನಿರ್ಧಾರ ಮಾಡಿದ್ದೇವೆ ಕನ್ನಮಂಗಲ ಸಸ್ಯ ತೋಟ, ಕಾಡುಗೋಡಿ ವೃಕ್ಷೋದ್ಯಾನ ಹೇಗೆ ಇದಕ್ಕೆ ಪೂರಕವಾಗಿದೆ ಯೊ ಹಾಗೆಯೇ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಜನಪದರು ರಂಗಮಂದಿರ ನೆರವಾಗಲಿದೆ ಎಂದರು. ಬೆಂಗಳೂರಿನ ಅತಿ ದೊಡ್ಡ ಕೆರೆಗಳಲ್ಲಿ ಎರಡನೆಯದು ಎಂದು ಹೆಸರು ಪಡೆದ ಎಲ್ಲೇ ಮಲ್ಲಪ್ಪ ಶೆಟ್ಟಿಕೆರೆ ಅಭಿವೃದ್ಧಿಗೆ ಸರ್ಕಾರ ಆರ್ಥಿಕ ನೆರವು ನೀಡಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.

 

ದ್ವಿತೀಯ ಪಿಯುಸಿ ಪರೀಕ್ಷೆ ರದ್ದು, ಎರಡು ದಿನ ಎಸ್ಎಸ್ ಎಲ್ ಸಿ ಪರೀಕ್ಷೆ -–ಎಸ್.ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ವರ್ಷ ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಮಾಡಲು ತೀರ್ಮಾನಿಸಲಾಗಿದೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಸೂಕ್ತ ದಿನಾಂಕಗಳಂದು ಎರಡು ದಿನಗಳ ಮಟ್ಟಿಗೆ ಅತ್ಯಂತ ಸರಳೀಕರಣಗೊಳಿಸಿ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಸಮಾಜದ ವಿವಿಧ ಸ್ತರಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಸಮಾಜದ ವಿವಿಧ ಗಣ್ಯ ವ್ಯಕ್ತಿಗಳು, ಹಿಂದಿನ ಶಿಕ್ಷಣ ಸಚಿವರು, ಮಾಧ್ಯಮದ ಮಿತ್ರರು, ಸಚಿವ ಸಂಪುಟದ ಸಹೋದ್ಯೋಗಿಗಳು, ಮಾನ್ಯ ಮುಖ್ಯಮಂತ್ರಿಗಳೂ ಸೇರಿದಂತೆ ಹಲವರೊಂದಿಗೆ ಈ ಕುರಿತು ಸಮಾಲೋಚನೆ ಮಾಡಲಾಗಿದೆ ಎಂದರು.

ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗಬಾರದು, ಅದೇ ಸಂದರ್ಭದಲ್ಲಿ ಅವರ ಆರೋಗ್ಯಕ್ಕೂ ಸಮಸ್ಯೆಯಾಗಬಾರದೆನ್ನುವ ಮಧ್ಯಮ ಪಥವೊಂದನ್ನು ಹುಡುಕಲು ಸಾಕಷ್ಟು ಪ್ರಯತ್ನ ಪಟ್ಟಿದ್ದೇವೆ. ಪರೀಕ್ಷೆ ನಡೆಸುವುದು ನಮ್ಮ ಪ್ರತಿಷ್ಠೆಯಾಗಬಾರದು ಆದರೆ ನಮ್ಮ ನಿಲುವು ಮಕ್ಕಳನ್ನು ಇಕ್ಕಟ್ಟಿಗೆ ಸಿಕ್ಕಿಸಬಾರದೆನ್ನುವ ಪ್ರಜ್ಞೆ ನಮ್ಮ ನಿರ್ಧಾರಗಳನ್ನು ನಿಯಂತ್ರಿಸಿದೆ ಎಂದು ಅವರು ಹೇಳಿದರು.

ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ 2020-21ನೇ ಸಾಲಿನಲ್ಲಿ ದಾಖಲಾಗಿರುವ ದ್ವಿತೀಯ ಪಿಯುಸಿ ಹೊಸ ವಿದ್ಯಾರ್ಥಿಗಳ ಫಲಿತಾಂಶವನ್ನು ಅವರು ಈ ಹಿಂದೆ ಪ್ರಥಮ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಅಂಕಗಳನ್ನು ನೀಡಿ ಪ್ರಕಟಗೊಳಿಸಲು ತೀರ್ಮಾನಿಸಲಾಗಿದೆ. ಈ ಕುರಿತಂತೆ ಇಲಾಖೆಯು ಮುಂದಿನ ದಿನಗಳಲ್ಲಿ ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಲಿದೆ ಹಾಗೂ ಜೂನ್ ಮಾಸಾಂತ್ಯಕ್ಕೆ ಫಲಿತಾಂಶ ಪ್ರಕಟಣೆ ಮಾಡಲಿದೆ ಎಂದು ಸುರೇಶ್ ಕುಮಾರ್ ಹೇಳಿದರು.

ಈ ರೀತಿ ನೀಡಿದ ಫಲಿತಾಂಶವು ಯಾವುದೇ ವಿದ್ಯಾರ್ಥಿಗೆ ತೃಪ್ತಿಕರವಾಗದೇ ಇದ್ದಲ್ಲಿ ಕೋವಿಡ್ ಅಲೆ ನಿಯಂತ್ರಣಕ್ಕೆ ಬಂದ ನಂತರ ಇಲಾಖೆಯು ನಡೆಸುವ ಪರೀಕ್ಷೆಗೆ ಹಾಜರಾಗಬಹುದು ಎಂದ ಸಚಿವರು ಪ್ರಸ್ತುತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿಕೊಂಡ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಖಾಸಗಿ ಅಭ್ಯರ್ಥಿಗಳ ಫಲಿತಾಂಶವನ್ನು ಮೇಲೆ ತಿಳಿಸಿದಂತೆ ಪ್ರಕಟಿಸಲು ಯಾವುದೇ ಸ್ಪಷ್ಟ ದಾಖಲೆಗಳು ಲಭ್ಯವಿಲ್ಲದ ಕಾರಣ ಈ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಇಲಾಖೆ ನಡೆಸುವ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಎಸ್ಎಸ್ ಎಲ್ ಸಿ ಪರೀಕ್ಷೆಗಳ ವಿವರ:

ಕೋವಿಡ್-19ರ ಪರಿಸ್ಥಿತಿಯಲ್ಲಿ 06 ವಿಷಯಗಳಿಗೆ ಸುದೀರ್ಘ ಅವಧಿಗೆ ಪರೀಕ್ಷೆಗಳನ್ನು ನಡೆಸಿದಲ್ಲಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ 06 ದಿನಗಳು ಬರುವುದು ಕಷ್ಟಸಾಧ್ಯವಾಗಿರುತ್ತದೆ. ಹಿಂದಿನ ಸಾಲಿನ ಕಲಿಕಾ ಗುಣಮಟ್ಟದ ಮಾನದಂಡ ನಮ್ಮಲ್ಲಿ ಇಲ್ಲದಿರುವ ಕಾರಣ ಮತ್ತು ಮುಂದಿನ ಉನ್ನತ ಶಿಕ್ಷಣದ ವ್ಯಾಸಂಗಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆಯು ಮುಖ್ಯವೆನ್ನುವ ಸಮಾನ ಅಭಿಪ್ರಾಯಗಳ ಕಾರಣ, ವಿದ್ಯಾರ್ಥಿಗಳ ಸುರಕ್ಷತಾ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರಸ್ತುತ ಕೋವಿಡ್-19ರ ಪರಿಸ್ಥಿತಿ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಪ್ರಸ್ತುತ ಸಾಲಿಗೆ ಸರಳೀಕರಿಸಿ ಕೇವಲ ಎರಡು ದಿನಗಳಲ್ಲಿ (ಒಂದು ದಿನ ಕೋರ್ ವಿಷಯಗಳು ಮತ್ತೊಂದು ದಿನ ಭಾಷಾ ವಿಷಯಗಳು) ಪರೀಕ್ಷೆಯನ್ನು ನಡೆಸಲಾಗುತ್ತದೆ.

ಕೇವಲ ಬಹು ಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆಯನ್ನು ನಡೆಸಲಾಗುವುದು. ಉತ್ತರ ಪತ್ರಿಕೆಯು OMR (Optical Mark Reader) ರೂಪದಲ್ಲಿರುವುದು. ಪ್ರತಿ ವಿಷಯಕ್ಕೆ ಗರಿಷ್ಠ 40 ಅಂಕಗಳಿಗೆ ಸೀಮಿತಗೊಳಿಸಿ ಪರೀಕ್ಷೆಯನ್ನು ನಡೆಸಲಾಗುವುದು.

ಒಟ್ಟು 03 ಕೋರ್ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು. ಇದರಲ್ಲಿ ಭಾಗ- 1 ಗಣಿತ, ಭಾಗ- 2 ವಿಜ್ಞಾನ ಮತ್ತು ಭಾಗ- 3ರಲ್ಲಿ ಸಮಾಜ ವಿಜ್ಞಾನದ ಪ್ರಶ್ನೆಗಳಿರುತ್ತವೆ. ಪರೀಕ್ಷಾ ಸಮಯವನ್ನು ಬೆಳಿಗ್ಗೆ 10.30 ರಿಂದ 01.30 ಗಂಟೆಯವರೆಗೆ ನಿಗಧಿಪಡಿಸಿ, ಒಟ್ಟು 3 ಗಂಟೆಯ ಕಾಲಾವಕಾಶ ಇರಲಿದೆ.

ಹಾಗೆಯೇ ಒಟ್ಟು 03 ಭಾಷಾ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು. ಇದರಲ್ಲಿ ಭಾಗ -1 ಪ್ರಥಮ ಭಾಷೆ, ಭಾಗ- 2 ದ್ವಿತೀಯ ಭಾಷೆ ಮತ್ತು ಭಾಗ -3ರಲ್ಲಿ ತೃತೀಯ ಭಾಷೆಯ ಪ್ರಶ್ನೆಗಳಿರುತ್ತವೆ. ಪರೀಕ್ಷಾ ಸಮಯವನ್ನು ಅಪರಾಹ್ನ 10.30 ರಿಂದ 01.30 ಗಂಟೆಯವರೆಗೆ ನಿಗದಿಪಡಿಸಿ, ಒಟ್ಟು 3.00 ಗಂಟೆಯ ಕಾಲಾವಕಾಶ ನೀಡಲಾಗುವುದು.

ಕೋರ್ ಮತ್ತು ಭಾಷಾ ವಿಷಯಗಳ ಪರೀಕ್ಷೆಗಳ ನಡುವೆ ಮೂರು ದಿನಗಳ ಅಂತರ ನೀಡಲಾಗುವುದು. ಎಲ್ಲ ಮಾದರಿಯ ವಿದ್ಯಾರ್ಥಿಗಳೂ ಇದೇ ವಿಧಾನ ಅನ್ವಯವಾಗುತ್ತದೆ.

ಪ್ರತಿ ವಿಷಯಕ್ಕೆ CCERF, CCERR ವಿದ್ಯಾರ್ಥಿಗಳಿಗೆ ಗರಿಷ್ಠ 80 ಅಂಕಗಳಿಗೆ ಮತ್ತು CCEPF, CCEPR, NSR, NSPR ವಿದ್ಯಾರ್ಥಿಗಳಿಗೆ ಗರಿಷ್ಠ 100 ಅಂಕಗಳಿಗೆ ಪರಿವರ್ತಿಸಿ, ಪ್ರತಿ ವಿಷಯದಲ್ಲಿ ವಿದ್ಯಾರ್ಥಿಯು ಪಡೆದ ಅಂಕಗಳನ್ನು ಅದಕ್ಕೆ ಅನುಗುಣವಾಗಿ ಪರಿವರ್ತಿಸಲಾಗುವುದು. ಇದರ ಜೊತೆಗೆ CCERF, CCERR ವಿದ್ಯಾರ್ಥಿಗಳಿಗೆ ಅಂತರಿಕ ಅಂಕಗಳನ್ನು ಸೇರ್ಪಡಿಸಿ ಪ್ರಸ್ತುತ ನಿಯಮದಂತೆ ಫಲಿತಾಂಶ ಪ್ರಕಟಿಸಲಾಗುವುದು.

ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿಧಧ ವಿದ್ಯಾರ್ಥಿಗಳಿಗೆ ಕನಿಷ್ಠ ಉತ್ತೀರ್ಣತಾ ಅಂಕಗಳನ್ನು ನೀಡಿ ಉತ್ತೀರ್ಣಗೊಳಿಸಲಾಗುವುದು. ಮುಂದುವರೆದು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅಂಕಗಳ ಆಧಾರದ ಮೇಲೆ ಎ, ಬಿ ಹಾಗೂ ಸಿ ಗ್ರೇಡ್ ಗಳನ್ನು ನೀಡಲಾಗುವುದು.

ಪರೀಕ್ಷೆಗೆ ಮುಂಚಿತವಾಗಿ ಮಾದರಿ ಪ್ರಶ್ನೆಪತ್ರಿಕೆಯನ್ನು ಮಂಡಳಿ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಹಾಗೆಯೇ ಶಾಲೆಗಳಿಗೆ ತಲುಪಿಸಲಾಗುವುದು.

ಹಿಂದಿನ ಸಾಲುಗಳಲ್ಲಿ ಸುಮಾರು 3000 ಪರೀಕ್ಷಾ ಕೇಂದ್ರಗಳನ್ನು ರಚಿಸಿ ಪರೀಕ್ಷೆಯನ್ನು ನಡೆಸಲಾಗುತ್ತಿತ್ತು. ಪ್ರಸ್ತುತ ವರ್ಷದಲ್ಲಿ ಪರೀಕ್ಷಾ ಕೇಂದ್ರಗಳನ್ನು ದ್ವಿಗುಣಗೊಳಿಸಿ, ಅಂದರೆ ಸುಮಾರು 6000 ಅದಕ್ಕೂ ಮೇಲ್ಪಟ್ಟು ಪರೀಕ್ಷಾ ಕೇಂದ್ರಗಳನ್ನು ರಚಿಸಿ ಪರೀಕ್ಷೆ ನಡೆಸಲಾಗುವುದು.

ಒಂದು ಕೊಠಡಿಗೆ ಗರಿಷ್ಠ 12 ವಿದ್ಯಾರ್ಥಿಗಳಂತೆ, ಒಂದು ಡೆಸ್ಕ್ ಗೆ ಕೇವಲ ಒಬ್ಬ ವಿದ್ಯಾರ್ಥಿಯಂತೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗುವುದು. ವಿದ್ಯಾರ್ಥಿಗಳ ನಡುವೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಲಾಗುವುದು.

ಹಾಸ್ಟೆಲ್ಗಳ/ವಸತಿ ಶಾಲೆಗಳ/ವಲಸೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ಬದಲಾವಣೆ ಅವಕಾಶ ಕಲ್ಪಿಸಲಾಗುವುದು. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಕಾಪಾಡಲು ಕಳೆದ ಸಾಲಿನ ಎಸ್ಓಪಿ ಯನ್ನು ಸೂಕ್ತ ಮಾರ್ಪಾಡುಗಳೊಂದಿಗೆ, ಆರೋಗ್ಯ ಇಲಾಖೆಯ ಸಲಹೆಯೊಂದಿಗೆ ಪರೀಕ್ಷೆ ನಡೆಸಲಾಗುವುದು.

ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿಯವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯಗೊಳಿಸಲಾಗುವುದು.

ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು, ಶಿಕ್ಷಕರು. ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಎನ್95 ಮಾಸ್ಕ್ನ್ನು ಕಡ್ಡಾಯವಾಗಿ ಧರಿಸಲು ವ್ಯವಸ್ಥೆ ಮಾಡಲಾಗುವುದು.

ಆರೋಗ್ಯ ಇಲಾಖೆಯ ಸಲಹೆ ಪಡೆದು 20 ದಿನಗಳ ಮುಂಚಿತವಾಗಿ ಪರೀಕ್ಷೆಯು ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು.

ಪತ್ರಿಕಾಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್, ಪಿಯು ನಿರ್ದೇಶಕಿ ಆರ್. ಸ್ನೇಹಲ್, ಸಾಶಿಇ ಆಯುಕ್ತ ವಿ. ಅನ್ಬುಕುಮಾರ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.